ಚೆನ್ನೈ: ತಮಿಳುನಾಡು ರಾಜ್ಯದಲ್ಲಿ ಕೊರೊನಾ ಮಹಾಮಾರಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಆಗಸ್ಟ್ ಕೊನೆಯವರೆಗೂ ಲಾಕ್‌ಡೌನ್ ಮುಂದುವರಿಸುವುದಾಗಿ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ನಿಯಂತ್ರಣ ಮೀರುತ್ತಿರುವುದರಿಂದ ಸರ್ಕಾರ ಆ.31ರವರೆಗೆ ಲಾಕ್‌ಡೌನ್ ವಿಸ್ತರಿಸಿದ್ದು, ಈ ಹಿಂದೆ ನೀಡಿದ್ದ ವಿನಾಯ್ತಿ ಮತ್ತು ನಿರ್ಬಂಧಗಳಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ತಿಳಿಸಿದ್ದಾರೆ.
ಈ ಕುರಿತು ಆದೇಶ ಹೊರಡಿಸಿರುವ ಅವರು, ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಸಾರ್ವಜನಿಕ ಆರೋಗ್ಯ ತಜ್ಞರ ಅಬಿಪ್ರಾಯಗಳ ಆಧಾರದ ಮೇಲೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವಿವರಿಸಿದ್ದಾರೆ.
ರಾಜ್ಯದಿಂದ ಹೊರಗೆ ಪ್ರಯಾಣ ಮಾಡುವವರು ಮತ್ತು ಒಳಬರುವವರು ಇ-ಪಾಸ್ ಪಡೆಯುವುದು ಕಡ್ಡಾಯ. ಅಂತರಜಿಲ್ಲಾ ಪ್ರಯಾಣಕ್ಕೆ ಕೂಡ ಇದು ಅನ್ವಯವಾಗುತ್ತದೆ ಎಂದು ತಿಳಿಸಿದ್ದಾರೆ.
ಇನ್ನು ಈವರೆಗೆ ಲಾಕ್‌ಡೌನ್ ಜಾರಿಯಿರುವ ಪ್ರದೇಶಗಳಲ್ಲಿ ಆಗಸ್ಟ್ ಅಂತ್ಯದವರೆಗೆ ಸಂಪೂರ್ಣ ಲಾಕ್‌ಡೌನ್ ಇರಲಿದ್ದು, ಭಾನುವಾರಗಳಂದು ಕೂಡ ವಿನಾಯ್ತಿ ಇರುವುದಿಲ್ಲ. ಇತರ ಜಿಲ್ಲೆಗಳಲ್ಲಿ ಸದ್ಯ ಇರುವ ನಿರ್ಬಂಧಗಳೇ ಮುಂದುವರಿಲಿದೆ . ಜತೆಗೆ, ಕೇಂದ್ರ ಸರ್ಕಾರದ ಮಾರ್ಗಸೂಚಿ ಅನುಸಾರ ರಾಜ್ಯಾದ್ಯಂತ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುವುದು. ಈ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ ಎಂದು ತಿಳಿಸಿದ್ದಾರೆ.