ಬೆಂಗಳೂರು: ಆಗಸ್ಟ್ 21 ಹಾಗೂ 22 ರಂದು ಗೌರಿ-ಗಣೇಶ ಹಬ್ಬವಿದ್ದು, ಪ್ರತಿ ವರ್ಷ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತಿತ್ತು. ಈ ಬಾರಿ ಕೋವಿಡ್ ಇರುವ ಪರಿಣಾಮ ಸಾರ್ವಜನಿಕ ಸ್ಥಳಗಳನ್ನು ಗಣೇಶ ಮೂರ್ತಿಗಳನ್ನು ಇಡುವುದನ್ನು ನಿಷೇಧ ಮಾಡಲಾಗಿದೆ ಎಂದು ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದರು.
ಶುಕ್ರವಾರ ತಮ್ಮ ಅಧ್ಯಕ್ಷತೆಯಲ್ಲಿ ಪಾಲಿಕೆ ಕೇಂದ್ರ ಕಚೇರಿ ಸಭಾಂಗಣ-01ರಲ್ಲಿ ಆಯೋಜಿಸಿದ್ದ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಎಲ್ಲಿಯೂ ಗಣೇಶ ಮೂರ್ತಿಗಳನ್ನು ಇಡುವಂತಿಲ್ಲ. ಕೆರೆ, ಕಲ್ಯಾಣಿ, ಟ್ಯಾಂಕ್‌ಗಳಲ್ಲಿ ವಿಸರ್ಜನೆ ಮಾಡಲು ಅನುಮತಿ ನೀಡುವುದಿಲ್ಲ. ಮನೆಯಲ್ಲೇ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನಿಟ್ಟು ಪೂಜಿಸಿ, ಮನೆಯಲ್ಲೇ ವಿಸರ್ಜನೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಕೇಂದ್ರ ಸರ್ಕಾರ ಈಗಾಗಲೇ ಅನ್‌ಲಾಕ್ 03 ಗೌಡ್‌ಲೆನ್ಸ್ ನೀಡಿದ್ದು, ಅದರಲ್ಲಿ ಯಾವುದೇ ಹಬ್ಬ, ಗುಂಪುಗೂಡವ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವಂತಿಲ್ಲ ಎಂದು ಸ್ಪಷ್ಟಪಡಿಸಿದೆ. ಆ ಬಗ್ಗೆ ರಾಜ್ಯ ಸರ್ಕಾರದಿಂದಲೂ ಆದೇಶ ಹೊರಡಿಸಲಾಗಿದೆ. ಸಾರ್ವಜನಿಕವಾಗಿ ಗಣೇಶ ಮೂರ್ತಿಗಳನ್ನಿಟ್ಟು ಪೂಜಿಸಿದರೆ ಹೆಚ್ಚು ಜನ ಸೇರುತ್ತಾರೆ. ಆದ್ದರಿಂದ ಕಡ್ಡಾಯವಾಗಿ ಸಾರ್ವಜನಿಕ ಸ್ಥಳದಲ್ಲಿ ಆಚರಿಸುವುದನ್ನು ನಿಷೇಧಿಸಲಾಗಿದೆ ಎಂಧರು.
ವ್ಯಾಪಾರ ಮಾಡಲು ಯಾವುದೇ ನಿರ್ಬಂಧವಿರುವುದಿಲ್ಲ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ವ್ಯಾಪಾರ-ವಹಿವಾಟು ನಡೆಸಿಕೊಳ್ಳಬಹುದು. ನಿಯಮ ಉಲ್ಲಂಘಿಸಿ ಸಾರ್ವಜನಿಕ ಸ್ಥಳದಲ್ಲಿ ಪ್ರತಿಷ್ಠಾಪನೆ ಮಾಡಿದಲ್ಲಿ, ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಕ್ರಮ ಕೈಗೊಳ್ಳುತ್ತೇವೆ. ಅದನ್ನು ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕಾಗುತ್ತದೆ ಎಂದು ಹೇಳಿದರು.