ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸಿಎಂ ಗೃಹ ಕಚೇರಿ ಕೃಷ್ಣಾ ಮತ್ತು ನಿವಾಸ ಕಾವೇರಿಗೆ 14 ದಿನಗಳ ಕಾಲ ಸಾರ್ವಜನಿಕ ಪ್ರವೇಶ ನಿಷೇಧಿಸಿದೆ.
ಇನ್ನು ಗೃಹ ಕಚೇರಿ ಕೃಷ್ಣಾ ಮತ್ತು ಕಾವೇರಿ ಅಧಿಕಾರಿಗಳು, ಸಿಬ್ಬಂದಿಗೂ ಕೋವಿಡ್ ಟೆಸ್ಟ್ ಮಾಡಿ 14 ದಿಗಳು ಅವರನ್ನು ಹೋಂ ಕ್ವಾರಂಟೈನ್ ಮಾಡಲಾಗುತ್ತಿದೆ.
ಸಿಎಂ ಜತೆ ಪ್ರಥಮ ಸಂಪರ್ಕದಲ್ಲಿದ್ದ ಸಚಿವರು ಉನ್ನತ ಅಧಿಕಾರಿಗಳು ಈಗಾಗಲೇ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದು ಅವರಲ್ಲಿ ಸಚಿವ ಗೋವಿಂದ ಕಾರಜೋಳ ಅವರ ಟೆಸ್ಟ್ ವರದಿ ನೆಗಿಟಿವ್ ಬಂದಿದೆ. ಆದರೂ ಅವರು ನಾಲ್ಕು ದಿನಗಳವರೆಗೆ ಹೋಂ ಕ್ವಾರಂಟೈನ್ ಆಗಲಿದ್ದಾರೆ. ಈ ನಡುವೆ ಸಿಎಂ ಗೃಹ ಕಚೇರಿ ಕೃಷ್ಣಾ ಮತ್ತು ನಿವಾಸ ಕಾವೇರಿ 11 ಮಂದಿಗೆ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಇನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸಿಎಂ ಅವರನ್ನು ಕಳೆದ ಶುಕ್ರವಾರ ಮತ್ತು ಶನಿವಾರ ಭೇಟಿ ಮಾಡಿದ್ದ ಹಿನ್ನೆಲೆಯಲ್ಲಿ ಪಂತ್ ಅವರು ಎರಡು ದಿನ ಹೋಂ ಕ್ವಾರಂಟೈನ್ ಆಗಲಿದ್ದಾರೆ. ಈ ವೇಳೆ ಕರ್ತವ್ಯಕ್ಕೆ ಯಾವುದೇ ತೊಂದರೆ ಆಗದಂತೆ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಿರಂತರವಾಗಿ ಮಾಹಿತಿ ಪಡೆದುಕೊಳ್ಳಲಿದ್ದಾರೆ.