ಬಡವರು, ದಲಿತರು, ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗೆ ಹೊಸ ಉತ್ಸಾಹದಿಂದ ಎಲ್ಲರೂ ಕಾರ್ಯ ನಿರ್ವಹಿಸಿ: ಸಿಎಂ ಸಲಹೆ

ಬೆಂಗಳೂರು: ರಾಜ್ಯದಲ್ಲಿನ ಬಡವರು, ದಲಿತರು, ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗೆ ವಿಶೇಷ ಕಾಳಜಿಯಿಂದ ಹಾಗೂ ಹೊಸ ಉತ್ಸಾಹದಿಂದ ಎಲ್ಲರೂ ಕಾರ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು.

ಕೆಎಎಸ್ ಅಧಿಕಾರಿಗಳ ಸಂಘದ ಕ್ಯಾಲೆಂಡರ್ ಮತ್ತು ದಿನಚರಿ ಬಿಡುಗಡೆ ಕಾರ್ಯಕ್ರಮದಲ್ಲಿ ದಿನಚರಿ ಬಿಡುಗಡೆ ಮಾಡಿ ಅವರು ಮಾತನಾಡಿದರು.
ಎಲ್ಲರಿಗೂ ಸಮಾನ ಅವಕಾಶ ದೊರೆತು, ಸಮಾಜದ ಮುಖ್ಯವಾಹಿನಿಗೆ ಬರುವಂತಾದಾಗ ಮಾತ್ರವೇ ಸಮಾನತೆ ಬರಲು ಸಾಧ್ಯ. ನಮ್ಮ ಸಮಾಜ ಜಾತಿ ವ್ಯವಸ್ಥೆಯಿಂದ ಕೂಡಿದೆ. ಜಾತಿ ಮತ್ತು ವರ್ಗ ವ್ಯವಸ್ಥೆ ಅಳಿಯಬೇಕಾದರೆ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ಸಿಗಲೇಬೇಕು ಎಂದರು.
ಸ್ವಾತಂತ್ರ್ಯ ಬಂದು 7 ದಶಕಗಳು ಕಳೆದರೂ ಇನ್ನೂ ಜಾತಿ ವ್ಯವಸ್ಥೇ ನಿರ್ಮೂಲನೆಯಾಗಿಲ್ಲ. ಎಲ್ಲಾ ಅಧಿಕಾರಿಗಳು ಜಾತ್ಯಾತೀತವಾಗಿ ಕಾರ್ಯ ನಿರ್ವಹಿಸಬೇಕು. ನಮ್ಮ ದೃಷ್ಟಿಕೋನ ಜಾತ್ಯಾತೀತವಾಗಿರಬೇಕು. ಯಾವುದೇ ಕಾರಣಕ್ಕೂ ಸ್ವಜಾತಿ ಪಕ್ಷಪಾತ ಮಾಡಬಾರದು. ಆಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ.
ಬಡವರ ಒಳಿತಿಗೆ ಕರ್ತವ್ಯ ನಿರ್ವಹಿಸುವಾಗ ಅಧಿಕಾರಿಗಳು ಪ್ರಾಮಾಣಿಕವಾಗಿರಬೇಕಲ್ಲದೆ, ವ್ಯವಸ್ಥೆಯನ್ನು ಸರಿ ಮಾಡುವ ಪ್ರಯತ್ನವನ್ನು ಮಾಡಬೇಕು. ತಹಸೀಲ್ದಾರ್, ಸಹಾಯಕ ಆಯುಕ್ತರು ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿಯಲ್ಲಿ ಎಲ್ಲರಿಗೂ ನ್ಯಾಯ ಒದಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು. ಬಡವರ ಬಗ್ಗೆ ಕರುಣೆಯಲ್ಲ, ಸಂವಿಧಾನ ನೀಡಿರುವ ಅವರ ಹಕ್ಕುಗಳ ರಕ್ಷಣೆ ಮಾಡುವ ಪ್ರಯತ್ನ ಮಾಡಬೇಕು ಎಂದು ತಿಳಿಸಿದರು.
ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡ ಪೂರ್ಣಗೊಳಿಸಲು ಹೆಚ್ಚುವರಿ ಅನುದಾನ ಒದಗಿಸಲಾಗುವುದು. ಪದೋನ್ನತಿ ಸೇರಿದಂತೆ ಸಂಘದ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಚಿವರಾದ ಈಶ್ವರ ಖಂಡ್ರೆ, ಭೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಾನೂನು ಸಲಹೆಗಾರ ಪೊನ್ನಣ್ಣ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Related









