ಚಿತ್ರದುರ್ಗ: ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತ ಬ್ಯಾಂಕ್ ಅಧಿಕಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿ ನಡೆದಿದೆ.
ಸಂತೋಷ್ (36) ಆತ್ಮಹತ್ಯೆಗೆ ಶರಣಾದ ಬ್ಯಾಂಕ್ ಅಧಿಕಾರಿ. ಪಟ್ಟಣದ ಖಾಸಗಿ ಲಾಡ್ಜ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿರುವ ಸಂತೋಷ್ ಅದರಲ್ಲಿ ಮೇಲಧಿಕಾರಿಗಳ ಕಿರುಕುಳ ಹೆಚ್ಚಾಗಿದ್ದರಿಂದ ನಾನು ಆತ್ಮಹತ್ಯೆ ಮಾಡಿಕೊಳ್ಳಬೇಕಾದ ಪರಿಸ್ಥಿತಿ ಬಂದಿದೆ ಎಂದು ಬರೆದಿದ್ದಾರೆ.
ಡೆತ್ ನೋಟ್ನಲ್ಲಿ ಮೇಲಧಿಕಾರಿಗಳ ಕಿರುಕುಳ ನೀಡಿದ್ದಾರೆ ಎಂದು ಬರೆದಿದ್ದು, ಸಂತೋಷ್ ಮಧ್ಯ ಪ್ರದೇಶದ ಖಾಸಗಿ ಬ್ಯಾಂಕ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅಲ್ಲಿನ ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಬೆಂಗಳೂರಿಗೆ ವರ್ಗಾವಣೆ ಕೋರಿದ್ದರು. ಆದರೆ ಬ್ಯಾಂಕ್ ಅಧಿಕಾರಿಗಳು ವರ್ಗಾವಣೆಗೂ ಕೂಡಾ 2 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಹೇಳಲಾಗುತ್ತಿದೆ.
ಇನ್ನು ಅಧಿಕಾರಿಗಳ ಲಂಚಾವತಾರದಿಂದ ಮನನೊಂದು ಸಂತೋಷ್ ಖಾಸಗಿ ಲಾಡ್ಜ್ ನಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತ ಸಂತೋಷ್ ಪತ್ನಿ ಲಾವಣ್ಯ ಅವರು ಈ ಸಂಬಂಧ ದೂರು ದಾಖಲಿಸಿದ್ದು, ಸ್ಥಳಕ್ಕೆ ಹೊಸದುರ್ಗ ಆರಕ್ಷಕ ವೃತ್ತ ನಿರೀಕ್ಷ (ಪೊಲೀಸ್ ಇನ್ಸ್ಪೆಕ್ಟರ್) ತಿಮ್ಮಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನು ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ತೆಗೆದುಕೊಳ್ಳುತ್ತಿದ್ದಾರೆ.