ಬೆಳಗಾವಿ: ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ಭಾಗದ ಹಿಂದುಳಿದ ವರ್ಗ ಮತ್ತು ಪರಿಶಿಷ್ಟ ವರ್ಗಕ್ಕೆ ಸೇರಿದ ವಿವಿಧ ಸಮುದಾಯದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗಲು ಯಲ್ಲಾಪುರದಲ್ಲಿ ವಸತಿ ನಿಲಯವನ್ನು ನಿರ್ಮಿಸಲು ಮುಂದಿನ ಆಯವ್ಯಯದಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಅವರು ಮಾತನಾಡಿದರು.
ಮೀಸಲಾತಿ ನೀಡಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ: ರಾಜ್ಯ ಸರ್ಕಾರ ಒಲಂಪಿಕ್ಸ್, ಪ್ಯಾರಾ ಒಲಂಪಿಕ್ಸ್, ಕಾಮನ್‌ವೆಲ್ತ್, ಏಷಿಯನ್ ಗೇಮ್ಸ್ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ 13 ಕ್ರೀಡಾಪಟುಗಳ ನೇಮಕಾತಿ ಮಾಡಿಕೊಳ್ಳಲಾಗಿದೆ. ಪೊಲೀಸ್ ಇಲಾಖೆಯಲ್ಲಿ 70 ಕಾನ್‌ಸ್ಟೆಬಲ್‌ಗಳನ್ನು ನೇರ ನೇಮಕಾತಿ ಹಾಗೂ 14 ಪಿಎಸ್‌ಐ ಗಳನ್ನು ನೇಮಕಾತಿ ಮಾಡಿಕೊಳ್ಳಲಾಗಿದೆ.
ಅಲ್ಲದೇ ಅರಣ್ಯ ಇಲಾಖೆಯಲ್ಲಿ ಶೇ.3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ ಇಲಾಖೆಗಳಲ್ಲಿ ಶೇ.2 ರಷ್ಟು ಮೀಸಲಾತಿ ನೀಡಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಲಾಗುವುದು. ಕಬ್ಬಡಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಬಗ್ಗೆ ಪರಿಶೀಲನೆಯನ್ನು ಸಹ ನಡೆಸಲಾಗುವುದು ಎಂದು ಸದನಕ್ಕೆ ತಿಳಿಸಿದರು.
56,432 ಹುದ್ದೆಗಳ ಭರ್ತಿಗೆ ಕ್ರಮ: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿಯಿವೆ. ಅದರಲ್ಲಿ ವಿವಿಧ ನಿಗಮ ಮಂಡಳಿಗಳಲ್ಲಿ 1,01,420 ಹುದ್ದೆಗಳು, ವಿಶ್ವವಿದ್ಯಾಲಯಗಳಲ್ಲಿ 14,677 ಹುದ್ದೆಗಳು ಒಟ್ಟು 1,88,037 ಹುದ್ದೆಗಳು ಖಾಲಿಯಿದೆ. ಈಗಾಗಲೇ 24,300 ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಆರ್ಥಿಕ ಇಲಾಖೆಯಿಂದ ಅನುಮತಿ ದೊರೆತಿದೆ. ಹೈದ್ರಾಬಾದ್ ಕರ್ನಾಟಕಕ್ಕೆ 371ಜೆ ಅಡಿ 32,132 ಹುದ್ದೆಗಳು ಭರ್ತಿಯಾಗಬೇಕಿದೆ. ಒಟ್ಟು 56,432 ಹುದ್ದೆಗಳ ಭರ್ತಿಗೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಇನ್ನು ಒಳಮೀಸಲಾತಿಯ ಬಿಕ್ಕಟ್ಟಿನಿಂದಾಗಿ ನೇಮಕಾತಿ ಪ್ರಕ್ರಿಯೆಯಲ್ಲಿ ವಿಳಂಬವುಂಟಾಗಿತ್ತು. ಈಗ ಈ ಸಮಸ್ಯೆ ಬಗೆಹರಿದಿದ್ದು, ಆರ್ಥಿಕ ಇಲಾಖೆಯ ಅನುಮತಿ ಪಡೆದು ಹಂತ ಹಂತವಾಗಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ತಿಳಿಸಿದರು.
Related










