ರಾಜ್ಯದ ಬರ ಪರಿಸ್ಥಿತಿ ನಿರ್ವಹಣೆಗೆ ವಿಶೇಷ ಒತ್ತು ನೀಡುವಂತೆ ಆಗ್ರಹಿಸಿ ಪ್ರಧಾನಿ, ಮುಖ್ಯಮಂತ್ರಿಗೆ ಎಎಪಿ ಪತ್ರ
ಬೆಂಗಳೂರು: ರಾಜ್ಯದ ಬರ ಪರಿಸ್ಥಿತಿ ನಿಭಾಯಿಸುವಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ವಿಫಲಗೊಂಡಿರುವುದರಿಂದ ಜನಸಾಮಾನ್ಯರು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ತಕ್ಷಣ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಬರ ಪರಿಸ್ಥಿತಿ ಸಂಕಷ್ಟಕ್ಕೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ನಿಗಾ ವಹಿಸಬೇಕು ಎಂದು ಒತ್ತಾಯಿಸಿ ಆಮ್ ಆದ್ಮಿ ಪಕ್ಷ ಪತ್ರ ಬರೆದಿದೆ.
ಮಂಗಳವಾರ ಪಕ್ಷದ ಬೆಂಗಳೂರು ಘಟಕದ ಅಧ್ಯಕ್ಷ ಡಾ.ಸತೀಶ್ ಕುಮಾರ್ ಅವರ ನೇತೃತ್ವದಲ್ಲಿ ಬೆಂಗಳೂರು ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿದ ತಂಡವು ಜಿಲ್ಲಾಧಿಕಾರಿಗಳಿಗೆ ಪತ್ರವನ್ನು ಹಸ್ತಾಂತರಿಸಿತು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್ ಕುಮಾರ್, ಬರಪೀಡಿತ ಪ್ರದೇಶದ ರೈತರಿಗೆ ಎಕರೆಗೆ 25 ಸಾವಿರ ರೂ. ಪರಿಹಾರ ಕೊಡಬೇಕು. ಪಶುಸಂಗೋಪನೆಯಲ್ಲಿ ತೊಡಗಿರುವ ಹಾಗೂ ಜಾನುವಾರುಗಳನ್ನು ಹೊಂದಿರುವ ರೈತರಿಗೆ ಪ್ರತಿ ಜಾನುವಾರಿಗೆ 5 ಸಾವಿರ ರೂ. ಪರಿಹಾರ ಕೊಡಬೇಕು. ಬೆಲೆ ಏರಿಕೆ ನೀಗಿಸಿ ಕುಟುಂಬ ನಿರ್ವಹಿಸಲು ಪ್ರತಿ ಕುಟುಂಬಕ್ಕೆ ಉಚಿತ ರೇಷನ್ ಒದಗಿಸಬೇಕು. ನರೇಗಾ ಅಥವಾ ಇನ್ನಿತರ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಗ್ರಾಮೀಣ ಭಾಗದ ಜನರಿಗೆ ಆದಾಯ ವ್ಯವಸ್ಥೆ ಕಲ್ಪಿಸಬೇಕು.
ಸಾಂಕ್ರಾಮಿಕ ರೋಗಗಳು ಹರಡದಂತೆ ನೋಡಿಕೊಂಡು ಸರ್ಕಾರಿ ಆಸ್ಪತ್ರೆಗಳ ವ್ಯವಸ್ಥೆ ಸುಧಾರಿಸಬೇಕು. ಬರ ಪೀಡಿತ ಪ್ರದೇಶಗಳ ಸರಿಯಾದ ವೈಜ್ಞಾನಿಕ ಸಮೀಕ್ಷೆ ನಡೆಸಬೇಕು. ಸರ್ವ ಪಕ್ಷಗಳ ನಿಯೋಗ ದೆಹಲಿಗೆ ತೆರಳಿ, ತುರ್ತು ಪರಸ್ಥಿತಿಗೆ ಸ್ಪಂದಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಬೇಕು. ರೈತರಿಗೆ ಬೆಳೆ ವಿಮೆಯ ತುರ್ತು ಪಾವತಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಬರ ಪರಿಸ್ಥಿತಿಯನ್ನು ನಿಭಾಯಿಸಲು ಕೇಂದ್ರ ಸರ್ಕಾರ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡಬೇಕು. ರಾಜ್ಯ ಸರ್ಕಾರವು ತನ್ನ ಪಾಲಿನ ಪರಿಹಾರ ಧನವನ್ನು ತಕ್ಷಣ ಬಿಡುಗಡೆ ಮಾಡಬೇಕು. ಎರಡೂ ಸರ್ಕಾರಗಲು ಪರಸ್ಪರ ದೋಷರೋಪ ಮಾಡುತ್ತ ಕಾಲಹರಣ ಮಾಡುತ್ತಿರುವುದು ಖಂಡನೀಯ. ಸ್ವಾರ್ಥ ರಾಜಕಾರಣವನ್ನು ಬದಿಗಿಟ್ಟು ಬರ ಸಂಕಷ್ಟದಲ್ಲಿ ಜನರ ಪರವಾಗಿ ನಿಲ್ಲಬೇಕು ಎಂದು ಡಾ.ಸತೀಶ್ ಕುಮಾರ್ ಆಗ್ರಹಿಸಿದ್ದಾರೆ.