NEWSಕೃಷಿನಮ್ಮಜಿಲ್ಲೆ

ಅಧಿಕೃತ ಪರವಾನಿಗೆ ಇಲ್ಲದೆ ರಸಗೊಬ್ಬರ ಮಾರಾಟ ಮಾಡಿದರೆ ಕ್ರಮ: ಡಿಸಿ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಅಧಿಕೃತ ರಸಗೊಬ್ಬರ ಮಾರಾಟದ ಪರವಾನಿಗೆ ಇಲ್ಲದೆ ರಸಗೊಬ್ಬರ ದಾಸ್ತನು ಹಾಗೂ ಮಾರಾಟ ಮಾಡುವವರು ಮತ್ತು ಕಾಳಸಂತೆಯಲ್ಲಿ ರಸಗೊಬ್ಬರ ಮಾರಾಟ ಮಾಡುವವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಎಚ್ಚರಿಕೆ ನೀಡಿದ್ದಾರೆ.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಕೃಷಿ ಇಲಾಖೆ ವತಿಯಿಂದ ನಡೆದ ಮುಂಗಾರು ಹಂಗಾಮಿನ ರಸಗೊಬ್ಬರ ತಯಾರಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಸಗೊಬ್ಬರ ದಾಸ್ತಾನು ಮತ್ತು ಗರಿಷ್ಟ ಮಾರಾಟ (ಎಂ.ಆರ್.ಪಿ) ದರಗಳ ವಿವರಗಳನ್ನು ಸಾರ್ವಜನಿಕರಿಗೆ ಎದ್ದು ಕಾಣುವಂತೆ ಪ್ರಮುಖವಾದ ಸ್ಥಳದಲ್ಲಿ ಪ್ರದರ್ಶಿಸಬೇಕು. ಡಿ.ಎ.ಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಇತರೆ ಸಂಯುಕ್ತ ರಸಗೊಬ್ಬರ ಬಳಕೆ ಹಾಗೂ ಸಾವಯುವ ಗೊಬ್ಬರಗಳನ್ನು ಬಳಕೆ ಮಾಡುವಂತೆ ರೈತರಿಗೆ ಹೆಚ್ಚಿನ ಅರಿವು ಮಾಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜೊತೆಗೆ ಗರಿಷ್ಠ ಮಾರಾಟ ದರಗಳಿಗಿಂತ ಹೆಚ್ಚಿನ ಬೆಲೆಗೆ ಯಾವುದೇ ರಸಗೊಬ್ಬರಗಳನ್ನು ಮಾರಾಟ ಮಾಡಿದರೇ ಅಂತವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವುದೆಂದು ಕಟ್ಟುನಿಟ್ಟಾಗಿ ಸೂಚಿಸಿದರು.

ಜಂಟಿ ಕೃಷಿ ನಿರ್ದೇಶಕರಾದ ಬಿ.ಜಿ ಕಲಾವತಿ ಅವರು ಮಾತನಾಡಿ ಮುಂಗಾರು 2025- ರ ಹಂಗಾಮಿಗೆ ಒಟ್ಟು 31799 ಮೆಟ್ರಿಕ್ ಟನ್ ಗಳಷ್ಟು ವಿವಿಧ ರಸಗೊಬ್ಬರಗಳ ಬೇಡಿಕೆಯಿದ್ದು, ಸದ್ಯಕ್ಕೆ 14213 ಮೆಟ್ರಿಕ್ ಟನ್ ಗಳು ವಿವಿಧ ರಸಗೊಬ್ಬರಗಳ ದಾಸ್ತನು ಲಭ್ಯವಿದೆ, ಬೇಡಿಕೆಗೆ ಅನುಗುಣವಾಗಿ ಹಂತ ಹಂತವಾಗಿ ರಸಗೊಬ್ಬರವು ಸರಬರಾಜುವಾಗುತ್ತದೆ ಎಂದು ತಿಳಿಸಿದರು.

ಸಭೆಯಲ್ಲಿ ಉಪ ಕೃಷಿ ನಿರ್ದೇಶಕರಾದ ಗಾಯಿತ್ರಿ, ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರುಗಳು, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಸಗಟು ಹಾಗೂ ಚಿಲ್ಲರೆ ಮಾರಾಟಗಾರರು, ರಸಗೊಬ್ಬರ ಸರಬರಾಜು ಮಾಡುವ ಸರಬರಾಜುದಾರರ ಪ್ರತಿನಿಧಿಗಳು ಉಪಸ್ಥಿತರಿದ್ದರು.

Megha
the authorMegha

Leave a Reply

error: Content is protected !!