
ಬೆಂಗಳೂರು: ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿಗೆ ಎಲ್ಲ ಸಹಕಾರ ನೀಡಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದರು.
ದೇವನಹಳ್ಳಿ ಟೌನ್‌ನ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದಲ್ಲಿ 2024-25 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಸಮಾರಂಭವನ್ನು ಧ್ವಜಾರೋಹಣ ನೆರವೇರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಜಿಲ್ಲೆಯ ಅಭಿವೃದ್ಧಿಯಲ್ಲಿ ಸರ್ಕಾರಿ ನೌಕರರ ಪಾತ್ರ ಬಹಳ ಮುಖ್ಯ, ಜಿಲ್ಲೆಯ ಎಲ್ಲ ಅಭಿವೃದ್ಧಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಪೋಡಿ ಅಭಿಯಾನದಲ್ಲಿ ಮೊದಲ ಜಿಲ್ಲೆಯಾಗಬೇಕು. ಅಭಿವೃದ್ಧಿಯಲ್ಲಿ ಮಾದರಿ ಜಿಲ್ಲೆ ಯನ್ನಾ ಮಾಡಬೇಕು ಈ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕು ಎಂದರು. ನೌಕರರ ಬೇಡಿಕೆಗಳಿಗೆ ಸರ್ಕಾರದ ಹಂತದಲ್ಲಿ ಚರ್ಚಿಸಲು ಎಲ್ಲಾ ರೀತಿಯ ಪ್ರಯತ್ನ ಮತ್ತು ಸಹಕಾರ ನೀಡಲಾಗುವುದು ಎಂದರು.
ಪ್ರತಿಯೊಬ್ಬರೂ ತಮ್ಮ ಆರೋಗ್ಯ ಮತ್ತು ದೇಹದ ಸದೃಢತೆಯನ್ನು ಕಾಪಾಡಿಕೊಳ್ಳಲು ಕ್ರೀಡೆಯ ಬಹು ಮುಖ್ಯ ಪಾತ್ರ ವಹಿಸುತ್ತದೆ. ಪ್ರತಿಯೊಬ್ಬರು ದಿನನಿತ್ಯ ಕ್ರೀಡೆಯಲ್ಲಿ ತೊಡಗಿಕೊಳ್ಳಬೇಕು. ಸರ್ಕಾರಿ ನೌಕರರು ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.
ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್ ಅನುರಾಧ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಬಿ.ರಾಜಣ್ಣ, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲ್ಲೂಕು ಅಧ್ಯಕ್ಷರಾದ ಜಗನ್ನಾಥ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ, ಪಿ.ಗಂಗಾಧರಪ್ಪ, ದೇವನಹಳ್ಳಿ ತಹಶೀಲ್ದಾರ್ ಹೆಚ್.ಬಾಲಕೃಷ್ಣ, ಇಒ ಶ್ರಿನಾಥ್ ಗೌಡ, ಜಿಲ್ಲೆಯ ಚುನಾಯಿತ ಜನ ಪ್ರತಿನಿಧಿಗಳು, ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು, ಸರ್ಕಾರಿ ನೌಕರರು ಉಪಸ್ಥಿತರಿದ್ದರು.