ಹನೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಪ್ರಸಿದ್ಧ ಪುಣ್ಯಕ್ಷೇತ್ರ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಮಣ್ಣೆತ್ತಿನ ಅಮಾವಾಸ್ಯೆ ವಿಶೇಷವಾಗಿ ಸಹಸ್ರಾರು ಭಕ್ತರು ಬಂದು ಮಾದಪ್ಪನಿಗೆ ಪೂಜೆ ಸಲ್ಲಿಸುತ್ತಿದ್ದಾರೆ.
ಮಣ್ಣೆತ್ತಿನ ಅಮಾವಾಸ್ಯೆ ವಿಶೇಷವಾಗಿ ಮಾದಪ್ಪನಿಗೆ ಬೆಳಗ್ಗೆಯಿಂದ ವಿವಿಧ ಪೂಜಾ ಕೈಗಳು ಜರಗಿತು. ಬೆಳಗಿನ ಜಾವದಿಂದಲೂ ಸರತಿ ಸಾಲಿನಲ್ಲಿ ತೆರಳಿದ ಭಕ್ತರು ಅರಕೆ ಪೂಜೆ ಸಲ್ಲಿಸಿ ಸ್ವಾಮಿಯ ದರ್ಶನ ಪಡೆದರು.
ಅಮಾವಾಸ್ಯೆ ವಿಶೇಷವಾಗಿ ಸಾಗರೋಪಾದಿಯಲ್ಲಿ ಸೇರಿದ್ದ ಸಹಸ್ರಾರು ಭಕ್ತರಲ್ಲಿ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದಾರೆ.
ಸರ್ಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ವ್ಯವಸ್ಥೆ ಕಲ್ಪಿಸಿರುವುದರಿಂದ ಇದರ ಸದುಪಯೋಗಕ್ಕೆ ಮುಂದಾಗಿರುವ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಮಹದೇಶ್ವರ ಬೆಟ್ಟಕ್ಕೆ ಆಗಮಿಸುತ್ತಿದ್ದಾರೆ. ತಾಲೂಕು ಸೇರಿದಂತೆ ಜಿಲ್ಲೆಯ ವಿವಿಧೆಡೆಗಳಿಂದ ಮಹಿಳೆಯರೇ ಹೆಚ್ಚಾಗಿ ಮಾದಪ್ಪನ ದರ್ಶನಕ್ಕೆ ಆಗಮಿಸುತ್ತಿದ್ದಾರೆ.
ಇನ್ನು ಇಂದು ಮಾದಪ್ಪನ ಸನ್ನಿಧಿಯಲ್ಲಿ ಬೆಳಗಿನ ಜಾವ ಸ್ವಾಮಿಗೆ ಅಭಿಷೇಕ, ಬಿಲ್ಪವಚ೯ನೆ ಸೇವೆ ಜರುಗುವ ಮೂಲಕ ಮಣ್ಣೆತ್ತಿನ ಅಮಾವಾಸ್ಯೆಯ ವಿಶೇಷ ಪೂಜೆ ಕೈಂಕರ್ಯಗಳು ಜರುಗಿದವು. ಈ ವಿಶೇಷ ಪೂಜೆಯಲ್ಲಿ ಭಕ್ತರು ಭಾಗಿಯಾಗಿ ಪೂಜೆ ಸಲ್ಲಿಸಿದರು. ಇದರ ಜತೆಗೆ ಮುಡಿಸೇವೆ, ಉರುಳು ಸೇವೆ, ಪಂಜಿನ ಸೇವೆಯನ್ನು ಸಲ್ಲಿಸಿದರು.