ಹನೂರು: ಚಾಮರಾಜನಗರ ಜಿಲ್ಲೆಗೆ ವಿಶೇಷ ಪ್ಯಾಕೇಜ್ ನೀಡುವ ಸಂಬಂಧ ಜಿಲ್ಲಾಧಿಕಾರಿಗಳಿಂದ ವರದಿ ಪಡೆದಿದ್ದು, ನಾಳೆ ಅಥವಾ ನಾಳಿದ್ದು ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಹನೂರು ತಾಲೂಕಿನ ಪ್ರಸಿದ್ಧ ಧಾರ್ಮಿಕ ಪುಣ್ಯಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಎನ್.ಎಚ್.ಎಂ.ನ ಒಳಗುತ್ತಿಗೆ ನೌಕರರು ಕಳೆದ 34 ದಿನಗಳಿಂದ ವಿವಿಧ ಬೇಡಿಕೆಗೆ ಆಗ್ರಹಿಸಿ ಧರಣಿ ನಡೆಸುತ್ತಿರುವ ಬಗ್ಗೆ ಮಾತನಾಡಿ, ಅವರಿಗೆಲ್ಲ ಏನೆಲ್ಲ ಸಹಾಯ ಮಾಡಬಹುದು ಎಂಬುದರ ಬಗ್ಗೆ ವರದಿ ತೆಗೆದುಕೊಂಡು ಬರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ನಾಳೆ ಅಥವಾ ನಾಳಿದ್ದು ಸಮಸ್ಯೆ ಬಗೆಹರಿಯಲಿದೆ ಎಂದು ತಿಳಿಸಿದರು.
ಬೆಂಗಳೂರು – ಮೈಸೂರು ದಶಪಥ ರಸ್ತೆಯ ಅವ್ಯವಸ್ಥೆಯ ಬಗ್ಗೆ ಮಾತನಾಡಿ, ಇದು ಕೇವಲ ಬೆಂಗಳೂರು- ಮೈಸೂರು ಸಂಪರ್ಕ ರಸ್ತೆಯಲ್ಲ, ಮೈಸೂರಿಗೆ ಇಡೀ ರಾಷ್ಟ್ರದಿಂದಲೇ ಸಂಪರ್ಕ ಕಲ್ಪಿಸುವ ರಸ್ತೆಯಾಗಿದ್ದು 8,000 ಕೋಟಿ ರೂಪಾಯಿ ರಸ್ತೆ ನಿರ್ಮಾಣ ಮಾಡಲಾಗಿದೆ ಅದರಲ್ಲಿ ಸಣ್ಣಪುಟ್ಟ ವ್ಯತ್ಯಾಸಗಳಿದ್ದು ಅದನ್ನು ಶೀಘ್ರ ಸರಿಪಡಿಸಲಾಗುವುದು ಎಂದು ತಿಳಿಸಿದರು.
ಯಡಿಯೂರಪ್ಪನವರು ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿರುವ ಹಿನ್ನೆಲೆ ಇಂದಿನ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲಿ ಅರಿಶಿಣ ಬೆಲೆ ಕುಸಿದು ರೈತರು ಕಂಗಾಲಾಗಿರುವ ಬಗ್ಗೆ ಮಾತನಾಡಿ, ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ವರದಿ ನೀಡಲಾಗುವುದು ಎಂದು ತಿಳಿಸಿದರು. ಬಳಿಕ ಉರಿಗೌಡ ನಂಜೇಗೌಡ ವಿವಾದದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ತಿಳಿಸಿದರು.
ಸಚಿವರಾದ ಎಸ್.ಟಿ. ಸೋಮಶೇಖರ್, ವಿ.ಸೋಮಣ್ಣ ಹಾಗೂ ಇನ್ನಿತರರು ಇದ್ದರು.