ಬೆಂಗಳೂರು: ನರೇಂದ್ರ ಮೋದಿ ಸರ್ಕಾರ ಮಾಡುತ್ತಿರುವ ಅನ್ಯಾಯಗಳನ್ನು ಖಂಡಿಸಿ ಮತ್ತು ಅರವಿಂದ್ ಕೇಜ್ರಿವಾಲ್ ವಿಚಾರದಲ್ಲಿ ಕೇಂದ್ರ ಸರ್ಕಾರ ಮಾಡುತ್ತಿರುವ ದ್ವೇಷ ರಾಜಕಾರಣವನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ವತಿಯಿಂದ ಜುಲೈ 30 ರಂದು, ಮಂಗಳವಾರ ನಗರದ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು.
ಅರವಿಂದ್ ಕೇಜ್ರಿವಾಲ್ ಅವರು ರಾಷ್ಟ್ರಮಟ್ಟದ ನಾಯಕರಾಗಿ ಬೆಳೆಯುವುದನ್ನು ಸಹಿಸಿಕೊಳ್ಳಲಾಗದೆ ನರೇಂದ್ರ ಮೋದಿ ಸರ್ಕಾರ ಅವರನ್ನು ಜೈಲಿನಲ್ಲೇ ಇರುವಂತೆ ಮಾಡಲು ಷಡ್ಯಂತ್ರ ಮಾಡಿದೆ, ಅವರ ಆರೋಗ್ಯ ಸರಿಯಿಲ್ಲ ಎಂದು ತಿಳಿದಿದ್ದರೂ ನಿರ್ಲಕ್ಷಿಸುವ ಮೂಲಕ ಜೀವದ ಜೊತೆ ಚೆಲ್ಲಾಟವಾಡುತ್ತಿದೆ ಮುಖ್ಯಮಂತ್ರಿ ಚಂದ್ರು ಕಿಡಿಕಾರಿದ್ದಾರೆ.
2024ರ ಲೋಕಸಭಾ ಚುನಾವಣೆಯಲ್ಲಿ ಸೋಲುವ ಭಯದಿಂದ ಇಂಡಿಯಾ ಒಕ್ಕೂಟದ ಬಲ ಕಡಿಮೆ ಮಾಡಲು, ಜನಪ್ರಿಯ ನಾಯಕ ಅರವಿಂದ್ ಕೇಜ್ರಿವಾಲ್ ಮತ್ತು ಇತರ ಪ್ರಮುಖ ನಾಯಕರನ್ನು ಜೈಲಿಗೆ ಹಾಕಿ, ವಿಪಕ್ಷಗಳ ಬ್ಯಾಂಕ್ ಅಕೌಂಟ್ ಗಳನ್ನು ಜಪ್ತಿ ಮಾಡುವ ಸರ್ವಾಧಿಕಾರಿ ಧೋರಣೆ ತೋರಿಸಿದ್ದಾರೆ ಎಂದು ಹೇಳಿದರು.
ಇಡಿ ಸಹಾಯದಿಂದ ಸುಳ್ಳು ಸಾಕ್ಷಿ ಸೃಷ್ಟಿಸಿ ಅರವಿಂದ್ ಕೇಜ್ರಿವಾಲ್‌ರನ್ನು ಬಂಧಿಸಲಾಗಿದೆ. ಹಲವು ಬಾರಿ ದಾಳಿ ಮಾಡಿದರೂ ಸಾಕ್ಷಿ ಸಿಗದೇ ಇದ್ದದನ್ನು ಗಮನಿಸಿ ದೆಹಲಿಯ ಸೆಷೆನ್ಸ್ ನ್ಯಾಯಾಲಯ ಇಡಿ ರಾಜಕೀಯ ಪ್ರೇರಿತವಾಗಿ ಕೆಲಸ ಮಾಡುತ್ತಿದೆ ಎಂದು ಛೀಮಾರಿ ಹಾಕಿದ್ದು, ಜಾಮೀನು ನೀಡಿತ್ತು. ಇಡಿ ಆಟ ನಡೆಯುವುದಿಲ್ಲ ಎಂದು ಗೊತ್ತಾಗುತ್ತಿದ್ದಂತೆ ಸಿಬಿಐ ಬಳಸಿ ರಾತ್ರೊರಾತ್ರಿ ಇಡಿ ಜೈಲಿನಿಂದ ಸಿಬಿಐ ಜೈಲಿಗೆ ವರ್ಗಾಯಿಸಿ ಸರ್ವಾಧಿಕಾರಿ ಧೋರಣೆ ತೋರಿದ್ದಾರೆ ಎಂದರು.
ಸರ್ವೋಚ್ಛ ನ್ಯಾಯಾಲಯ ಒಂದು ಪ್ರಕರಣದಲ್ಲಿ ಜಾಮೀನು ನೀಡಿದ ನಂತರವೂ ಕಾನೂನು ಲೋಪದೋಷಗಳನ್ನು ಬಳಸಿ ನಿರಂತರವಾಗಿ ಜೈಲಿನಲ್ಲಿಡುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಬಂಧಿತವಾಗಿರುವ ವ್ಯಕ್ತಿಗಳ ಆರೋಗ್ಯ ಮತ್ತು ಸುರಕ್ಷತೆ ಖಚಿತಪಡಿಸುವುದು ಸರ್ಕಾರದ ಜವಾಬ್ದಾರಿ ಮತ್ತು ಕರ್ತವ್ಯ. ಬಂಧನದಲ್ಲಿರುವ ವ್ಯಕ್ತಿಯ ಆರೋಗ್ಯ ಕ್ಷೀಣಿಸುತ್ತಿದ್ದರೆ, ಸ್ವತಂತ್ರ ವೈದ್ಯರಿಂದ ಪರೀಕ್ಷೆ ಮಾಡಿಸಿಕೊಳ್ಳುವ ಹಕ್ಕು ಇರಬೇಕು ಎಂದರು.
ಕಾಂಗ್ರೆಸ್, ಸಿಪಿಐ, ಸಿಪಿಐ (ಎಂ), ಎಸ್‌ಡಿಪಿಐ, ಕರ್ನಾಟಕ ರಾಜ್ಯ ರೈತ ಸಂಘ, ಜಯ ಕರ್ನಾಟಕ ಸಂಘಟನೆ, ಜಯ ಕರ್ನಾಟಕ ಜನಪರ ಸೇನೆ, ಕನ್ನಡ ಚಳವಳಿ ಕೇಂದ್ರ ಮತ್ತು ಕರ್ನಾಟಕ ಖಾಸಗಿ ಶಾಲಾ-ಕಾಲೇಜು ಪೋಷಕರ ಸಂಘಟನೆಗಳ ಸಮನ್ವಯ ಸಮಿತಿ ಆಮ್ ಆದ್ಮಿ ಪಾರ್ಟಿ ಹೋರಾಟಕ್ಕೆ ಬೆಂಬಲ ಕೊಟ್ಟಿವೆ ಎಂದರು.
ಮಾಜಿ ಸ್ಪೀಕರ್ ಮತ್ತು ಚಿತ್ರಕಲಾ ಪರಿಷತ್ ಅಧ್ಯಕ್ಷ ಡಾ. ಬಿ.ಎಲ್ ಶಂಕರ್, ಮಾಜಿ ರಾಜ್ಯಸಭಾ ಸದಸ್ಯ ಡಾ. ಎಲ್ ಹನುಮಂತಯ್ಯ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ, ಸಾಹಿತಿ ಪ್ರೊ. ಎಸ್.ಜಿ ಸಿದ್ದರಾಮಯ್ಯ, ಕನ್ನಡ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪ್ರೊ. ಎಲ್.ಎನ್. ಮುಕುಂದರಾಜ್, ನಾಟಕ ಅಕಾಡೆಮಿ ಅಧ್ಯಕ್ಷ ನಾಗರಾಜ ಮೂರ್ತಿ, ಶಿಕ್ಷಣ ತಜ್ಞರಾದ ನಿರಂಜನರಾಧ್ಯ, ಸಿಪಿಐ ಕಾರ್ಯದರ್ಶಿ ಸಾಥಿ ಸುಂದರೇಶ್ ಮತ್ತು ಸಿಪಿಐಂ ಮುಖಂಡ ಬಸವರಾಜು.
ಮಾಜಿ ಸಚಿವ ಹಾಗೂ ಹಿಂದುಳಿದ ಆಯೋಗದ ಮಾಜಿ ಅಧ್ಯಕ್ಷ ಜಯಪ್ರಕಾಶ್ ಹೆಗಡೆ, ರೈತ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್, ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮುಜೀಬ್, ಸಿಪಿಐಎಂ ರಾಜ್ಯ ಪ್ರಧಾನ ಕಾರ್ಯದರ್ಶಿ ಯು ಬಸವರಾಜು ಸೇರಿದಂತೆ ಪ್ರಮುಖ ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಚಂದ್ರು ತಿಳಿಸಿದರು.