ಬೆಳಗಾವಿ: ವೇತನ ಸೇರಿದಂತೆ ಇತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೆಳಗಾವಿಯ ಸುವರ್ಣ ಸೌಧದ ಬಳಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹದಲ್ಲಿ ಎದೆನೋವು ಮತ್ತು ಉಸಿರಾಟದ ಸಮಸ್ಯೆಯಿಂದ ಜಿಲ್ಲಾಸ್ಪತ್ರೆಗೆ ದಾಖಲಾಗಿರುವ ಸತ್ಯಾಗ್ರಹದ ನೇತೃತ್ವ ವಹಿಸಿರುವ ಚಂದ್ರಶೇಖರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಶನಿವಾರ ಮುಂಜಾನೆ 5 ಗಂಟೆ ಸುಮಾರಿಗೆ ಚಂದ್ರಶೇಖರ್ ಅವರ ಆರೋಗ್ಯದಲ್ಲಿ ಏರುಪೇರಾಗಿ ಅವರನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಬಳಿಕ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದೆ. ಆದರೆ ಅವರನ್ನು ಈಗಲೇ ಡಿಸ್ಚಾರ್ಜ್ ಮಾಡಲು ಸಾಧ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಇನ್ನು ಉಪವಾಸ ಸತ್ಯಾಗ್ರಹ ನಿರತ ಸಾರಿಗೆಯ ಮತ್ತೊಬ್ಬ ನೌಕರರ ಕೇಶವನ್ ಎಂಬುವರ ಆರೋಗ್ಯದಲ್ಲೂ ತುಸು ಏರುಪೇರಾಗಿ ಅವರನ್ನು ನಿನ್ನೆ ರಾತ್ರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ತಪಾಸಣೆ ಮಾಡಿದ ವೈದ್ಯರು ಚಿಕಿತ್ಸೆ ನೀಡಿದರು. ಅದಾದ ಸುಮಾರು 1 ಗಂಟೆಯ ಬಳಿಕ ಅವರ ಆರೋಗ್ಯ ಸ್ಥಿರವಾಗಿದೆ ಏನು ತೊಂದರೆ ಇಲ್ಲ ಎಂದು ವೈದ್ಯರು ಖಚಿತಪಡಿಸಿ ಅವನ್ನು ಹೊರರೋಗಿಯಾಗಿ ಚಿಕಿತ್ಸೆ ನೀಡಿ ವಾಪಸ್ ಕಳುಹಿಸಿದ್ದಾರೆ.
ಇಂದು (ಡಿ.25) ಬೆಳಗ್ಗೆ ಸತ್ಯಾಗ್ರಹ ನಿರತ ನೌಕರರನ್ನು ಸ್ಥಳಕ್ಕೇ ಬಂದು ತಪಾಸಣೆ ಮಾಡಿರುವ ವೈದ್ಯರು ಯಾವುದೇ ಆರೋಗ್ಯ ಸಮಸ್ಯೆ ಇಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಏನು ಐದು ಮಂದಿ ಉಪವಾಸ ನಿರತ ನೌಕರರ ಆರೋಗ್ಯ ಸ್ಥಿರವಾಗಿದ್ದು ಉಪವಾಸ ಸತ್ಯಾಗ್ರಹವನ್ನು ಮುಂದುವರಿಸುತ್ತಿದ್ದಾರೆ.