ಖಾರ್ಗೋನ್: ಬಸ್ಸೊಂದು ಸೇತುವೆಯಿಂದ ಸುಮಾರು 50 ಅಡಿ ಆಳಕ್ಕೆ ಉರುಳಿ ಬಿದ್ದ ಪರಣಾಮ ಕನಿಷ್ಠ 14 ಮಂದಿ ಮೃತ ಪಟ್ಟು 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ನಡೆದಿದೆ.
ಬಸ್‌ನಲ್ಲಿ 70-80ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಇನ್ನು ಬಸ್ ಸೇತುವೆಯಿಂದ ಕೆಳಕ್ಕೆ ಬಿದ್ದಿದ್ದರಿಂದ ಬಸ್ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಈ ವೇಳೆ 14 ಮಂದಿ ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದ್ದು, ಸಾವಿನ ಸಂಖ್ಯೆ ಇನ್ನು ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಅವಘಡದ ಬಗ್ಗೆ ಹೇಳಿಕೆ ನೀಡಿರುವ ಜಿಲ್ಲಾಧಿಕಾರಿ ಶಿವರಾಜ್ ಸಿಂಗ್, ಇಂದೋರ್‌ಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಡೊಂಗರ್‌ಗಾಂವ್ ಪ್ರದೇಶದಲ್ಲಿ ಸೇತುವೆಯಿಂದ ಕೆಳಗೆ ಬಿದ್ದಿದೆ. ಇದರಿಂದ 14 ಮಂದಿ ಮೃತಪಟ್ಟಿದ್ದಾರೆ. ಇನ್ನು ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆಯ ಅಗತ್ಯವಿರುವವರನ್ನು ಜಿಲ್ಲಾಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ದಾಖಲು ಮಾಡಲಾಗುವುದು ಎಂದು ತಿಳಿಸಿದರು.
ಇನ್ನು ಬಸ್ ಸೇತುವೆಯಿಂದ ಕಳೆಗೆ ಬಿದ್ದು 14ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಸುತ್ತಮುತ್ತಲ ಗ್ರಾಮಗಳ ಸಾವಿರಾರು ಮಂದಿ ಸ್ಥಳಕ್ಕೆ ದೌಡಾಯಿಸಿದರು. ಇತ್ತ ಮೃತರ ಸಂಬಂಧಿಕರ ದುಃಖ ಮಡುಗಟ್ಟಿದ್ದು ಅವರ ಆಕ್ರಂದನ ಮುಗಿಲು ಮುಟ್ಟುವಂತಿತ್ತು.