ರಾಷ್ಟ್ರಕವಿ ಕುವೆಂಪುರಿಗೆ ಭಾರತ ರತ್ನ ಕೊಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸಂಪುಟ ನಿರ್ಧಾರ: ಸಚಿವ HKP

ಬೆಂಗಳೂರು: ವಿಶ್ವ ಮಾನವ ಸಂದೇಶ ಸಾರಿದ ಕುವೆಂಪು ಅವರ ಬರಹಗಳು ಮತ್ತು ಚಿಂತನೆಗಳನ್ನು ರಾಷ್ಟ್ರವ್ಯಾಪಿಯಾಗಿಸಲು, ಆ ಮೂಲಕ ಸಮಾಜದಲ್ಲಿ ಜಾತ್ಯತೀತ ಮತ್ತು ಸೌಹಾರ್ದ ಮನೋವೃತ್ತಿಯನ್ನು ಬೆಳೆಸಲು ಕುವೆಂಪು ಅವರಿಗೆ ಕೇಂದ್ರ ಸರ್ಕಾರವು ಭಾರತ ರತ್ನ ಪ್ರಶಸ್ತಿಯನ್ನು ನೀಡುವಂತೆ ಶಿಫಾರಸು ಮಾಡುವ ತೀರ್ಮಾನವನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ.
ಗುರುವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಷ್ಟ್ರಕವಿ ಕುವೆಂಪು ಅವರಿಗೆ ಭಾರತ ರತ್ನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡಲು ನಿರ್ಧರಿಸಿದೆ ಎಂದು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.
ಕುವೆಂಪು ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಲು ಕೇಂದ್ರಕ್ಕೆ ಶಿಫಾರಸು ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಹಿರಿಯ ಸಾಹಿತಿಗಳು ಈ ಹಿಂದೆಯೇ ಮನವಿ ಮಾಡಿದ್ದರು. ಅದರಂತೆ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ ಅವರು ಕನ್ನಡದ ಮೇರುಕವಿ, ನಾಟಕಕಾರ ಮತ್ತು ವಿಮರ್ಶಕ. ಕನ್ನಡ ಸಾಹಿತ್ಯಕ್ಕೆ ಕುವೆಂಪು ಕೊಡುಗೆಯನ್ನು ಗುರುತಿಸಿ ಕರ್ನಾಟಕ ಸರ್ಕಾರ ‘ರಾಷ್ಟ್ರಕವಿ’ ಬಿರುದನ್ನು 1964ರಲ್ಲಿ ನೀಡಿ ಗೌರವಿಸಿತು.
ಇನ್ನು ಕುವೆಂಪು ಅವರ ‘ಶ್ರೀ ರಾಮಾಯಣ ದರ್ಶನಂ’ ಕೃತಿಗೆ ಜ್ಞಾನಪೀಠ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿ ಪಡೆದ ಮೊದಲ ಕನ್ನಡ ಸಾಹಿತಿ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.
Related








