ಬೆಂಗಳೂರು: ಒಳ ಮೀಸಲಾತಿ ಕುರಿತಾಗಿ ಸಚಿವ ಸಂಪುಟ ಸಭೆಯ ತೀರ್ಮಾನಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಯ ಅನುಷ್ಠಾನದ ಕುರಿತಂತೆ ಇರುವ ಸಮಸ್ಯೆಗಳ ಬಗ್ಗೆ ಸಿಎಂ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಯಿತು.
ಈ ವೇಳೆ ಮಾತನಾಡಿದ ಸಿಎಂ, ರೋಸ್ಟರ್ ಜಾರಿ ಕುರಿತಾಗಿ ಎಲ್ಲರ ಅಹವಾಲುಗಳನ್ನು ಆಲಿಸಿ, ಯಾವುದೇ ಜಾತಿಗೆ ರೋಸ್ಟರ್‌ನಲ್ಲಿ ಅನ್ಯಾಯವಾಗದಂತೆ ಖಾತ್ರಿಪಡಿಸಲಾಗುವುದು ಎಂದು ಹೇಳಿದರು.
ಇನ್ನು ಜಾತಿ ಪ್ರಮಾಣ ಪತ್ರ ಯಾವ ರೀತಿಯಲ್ಲಿ ನೀಡಬೇಕು ಎಂಬ ಕುರಿತು ವಿವರವಾದ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಲಾಗಿದೆ. ನೇಮಕಾತಿಗೆ ಇದ್ದ ನಿರ್ಬಂಧವನ್ನು ತೆರವುಗೊಳಿಸಿದ ಬಳಿಕ ಅಭ್ಯರ್ಥಿಗಳ ವಯೋಮಿತಿಯನ್ನು ಒಂದು ಅವಧಿಗೆ ಹೆಚ್ಚಳ ಮಾಡಲಾಗಿದೆ. ಕೆಇಎಯಲ್ಲಿ ಈಗಾಗಲೇ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ ಎಂದರು.
ಒಳ ಮೀಸಲಾತಿ ಜಾರಿ ಕುರಿತಾಗಿ ಸುಪ್ರೀಂಕೋರ್ಟ್ ನಿರ್ದೇಶನಗಳ ಪ್ರಕಾರ ಕಾಯ್ದೆ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸಚಿವರಾದ ಡಾ.ಜಿ.ಪರಮೇಶ್ವರ, ಎಚ್.ಸಿ.ಮಹದೇವಪ್ಪ, ಕೆ.ಎಚ್.ಮುನಿಯಪ್ಪ, ಶಿವರಾಜ ತಂಗಡಗಿ, ಎಚ್.ಕೆ.ಪಾಟೀಲ್, ಪ್ರಿಯಾಂಕ್ ಖರ್ಗೆ, ಬಿ.ಆರ್.ತಿಮ್ಮಾಪುರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಅಪರ ಮುಖ್ಯಕಾರ್ಯದರ್ಶಿ ಅಂಜುಂ ಪರ್ವೇಜ್ ಇನ್ನು ಮುಂತಾದವರು ಉಪಸ್ಥಿತರಿದ್ದರು.

Related









