ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಿರುವ ಜಾತಿ ಗಣತಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯಿಂದ ಹೈಕೋರ್ಟ್ ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಹಿಂದೆ ಸರಿದಿದ್ದಾರೆ.
ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಗೌರವಾಧ್ಯಕ್ಷ, ಚಿತ್ರನಟ ಡಾ. ಮುಖ್ಯಮಂತ್ರಿ ಚಂದ್ರು ಸೇರಿ 13 ವಿವಿಧ ಹಿಂದುಳಿದ ವರ್ಗಗಳ ಸಂಘ-ಸಂಸ್ಥೆಗಳು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಂಗಾಮಿ ಮುಖ್ಯ ನ್ಯಾ.ಅಲೋಕ್ ಆರಾಧೆ ಹಾಗೂ ನ್ಯಾ.ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ರಾಜ್ಯದ ಎಲ್ಲ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸ್ಥಿತಿಗತಿ ಅರಿಯಲು ಆಯೋಗ ನಡೆಸಿರುವ ಜಾತಿ ಗಣತಿಗೆ ಸಂಬಂಧಿಸಿದ ಅರ್ಜಿಯಲ್ಲಿ ಪ್ರತಿವಾದಿಯಾಗಿರುವ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ತಮಗೆ ಪರಿಚಯ ಇರುವ ಕಾರಣ ಅರ್ಜಿ ವಿಚಾರಣೆಯಿಂದ ತಾವು ಹಿಂದೆ ಸರಿಯುತ್ತಿರುವುದಾಗಿ ನ್ಯಾ.ವಿಶ್ವಜಿತ್ ಶೆಟ್ಟಿ ತಿಳಿಸಿದರು.
ನ್ಯಾ.ವಿಶ್ವಜಿತ್ ಶೆಟ್ಟಿ ಅವರನ್ನು ಒಳಗೊಂಡಿರದ ನ್ಯಾಯಪೀಠದ ಮುಂದೆ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸುವಂತೆ ರಿಜಿಸ್ಟ್ರಾರ್ ಜನರಲ್‍ಗೆ ನಿರ್ದೇಶಿಸಿದ ಹಂಗಾಮಿ ಮುಖ್ಯ ನ್ಯಾ.ಅಲೋಕ್ ಆರಾಧೆ ವಿಚಾರಣೆಯನ್ನು ಮುಂದೂಡಿದರು.
ಪ್ರಕರಣ ಏನು: ಜಾತಿ ಗಣತಿ ಸಮೀಕ್ಷೆ ನಡೆಸಿ ಆರು ವರ್ಷ ಕಳೆದರೂ ಆಯೋಗ ಇನ್ನೂ ಸರಕಾರಕ್ಕೆ ತನ್ನ ವರದಿ ಸಲ್ಲಿಸಿಲ್ಲ. ಆ ಕುರಿತು ಮನವಿ ಮಾಡಿದರೂ ಆಯೋಗ ಸ್ಪಂದಿಸುತ್ತಿಲ್ಲ.
ಈ ಸಮೀಕ್ಷಾ ವರದಿಯನ್ನು ಸರಕಾರಕ್ಕೆ ಸಲ್ಲಿಸುವಂತೆ ಹಿಂದುಳಿದ ವರ್ಗಗಳ ಆಯೋಗಕ್ಕೆ ನಿರ್ದೇಶನ ನೀಡಬೇಕು. ಆಯೋಗ ಸಲ್ಲಿಸುವ ವರದಿಯನ್ನು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲು ಆದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.