ಬೆಂಗಳೂರು: ಕಾವೇರಿ ಜಲ ವಿವಾದ ಸಂಬಂಧ ಗುರುವಾರ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಸೆ.22ರಂದು ಸಂಜೆ 6 ಗಂಟೆಗೆ ವಿಧಾನಸೌಧದ ಸಭಾಂಗಣದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ.
ಸಭೆಯಲ್ಲಿ ಕಾವೇರಿ ನೀರು ಉಳಿಸಿಕೊಳ್ಳಲು ಏನು ಮಾಡಬೇಕು ಎಂಬುರ ಬಗ್ಗೆ ಸಚಿವರ ಜತೆ ಮುಖ್ಯಮಂತ್ರಿಗಳು ಚರ್ಚೆ ನಡೆಸಲಿದ್ದಾರೆ. ಸಭೆ ಬಳಿಕ ಸುಪ್ರೀಂ ಕೋರ್ಟ್ಗೆ ಅಫಿಡವಿಟ್ ಸಲ್ಲಿಸುವ ಸಾಧ್ಯತೆ ಇದೆ.
ಈಗಾಗಲೇ ಕರ್ನಾಟಕದ ಜತೆ ಮಾತುಕತೆಯೇ ಇಲ್ಲ. ಸುಪ್ರೀಂ ಕೋರ್ಟ್ ತೀರ್ಪು ಅಂತಿಮ ಎಂದು ಕಡ್ಡಿ ಮುರಿದಂತೆ ತಮಿಳುನಾಡು ಹೇಳಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ವಿಚಾರವಾಗಿ ಮುಂದೆ ಏನು ಮಾಡಬೇಕೆಂಬ ಅನ್ನೋದರ ಬಗ್ಗೆ ಸಭೆಯಲ್ಲಿ ಸಮಾಲೋಚನೆ ನಡೆಸಲಾಗುವುದು ಎಂದು ತಿಳಿದು ಬಂದಿದೆ.
ಇನ್ನು ಸಂಕಷ್ಟ ಸೂತ್ರ ಸಿದ್ಧಪಡಿಸುವಂತೆ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ ಸಿಎಂ ನೇತೃತ್ವದ ನಿಯೋಗ ನಿನ್ನೆ ಮನವಿ ಮಾಡಿದೆ. ಅದಕ್ಕೆ ಕೇಂದ್ರ ಸಚಿವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗುತ್ತಿದೆ.
ಕಾವೇರಿ ಕೊಳ್ಳದ ಕೆಆರ್‌ಎಸ್, ಹೇಮಾವತಿ, ಕಬಿನಿ ಹಾಗೂ ಹಾರಂಗಿ ಜಲಾಶಯದಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಕಡಿಮೆ ನೀರು ಸಂಗ್ರಹ ಇದೆ. ಮಳೆ ಕೊರತೆ ಕಾರಣ ನಾಲ್ಕೂ ಜಲಾಶಯಗಳಲ್ಲಿ 42.15 ಟಿಎಂಸಿ ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಇದರಲ್ಲಿ ಡೆಡ್ ಸ್ಟೋರೇಜ್ ಹೊರತುಪಡಿಸಿದರೆ 32.56 ಟಿಎಂಸಿ ಅಡಿಗಳಷ್ಟು ನೀರನ್ನು ಮಾತ್ರ ಬಳಸಿಕೊಳ್ಳಬಹುದಾಗಿದೆ.