NEWSನಮ್ಮಜಿಲ್ಲೆನಮ್ಮರಾಜ್ಯ

ಮಕ್ಕಳು ರಾಷ್ಟ್ರದ ಆಸ್ತಿ, ಮಕ್ಕಳ ರಕ್ಷಣೆ ನಮ್ಮ ಜವಾಬ್ದಾರಿ: ಆಯೋಗದ ಅಧ್ಯಕ್ಷ ಕೆ.ನಾಗಣ್ಣ ಗೌಡ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಇಂದಿನ ಮಕ್ಕಳು ಮುಂದಿನ ಪ್ರಜೆಗಳು, ಮಕ್ಕಳು ದೇಶದ ಆಸ್ತಿ, ಮಕ್ಕಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣ ಗೌಡ ಅವರು ಹೇಳಿದರು.

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದ ಜಿಲ್ಲಾಪಂಚಾಯಿತಿ ಸಭಾಂಗಣದಲ್ಲಿ ವಿವಿಧ ಇಲಾಖೆಯ ಜಿಲ್ಲಾ/ ತಾಲೂಕು ಮಟ್ಟದ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ “ಮಕ್ಕಳ ಹಕ್ಕುಗಳು ಮತ್ತು ಕಾನೂನು ಕುರಿತು ಜಿಲ್ಲಾ ಮಟ್ಟದ ಒಂದು ದಿನದ ತರಬೇತಿ ಕಾರ್ಯಗಾರ”ದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕಲ್ಪಿಸುವುದರಿಂದ ಮುಂದಿನ ದಿನಗಳಲ್ಲಿ ದೇಶದ ಅಭಿವೃದ್ಧಿಗೆ ಹೆಚ್ಚಿನ ಕೊಡುಗೆ ನೀಡುತ್ತಾರೆ. ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಹೊಸ ಹೊಸ ಕಾನೂನುಗಳು ಬರುತ್ತದೆ, ಕಾನೂನುಗಳು ತಿದ್ದುಪಡಿ ಆಗುತ್ತದೆ. ಆ ಕಾನೂನುಗಳ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಲು ಕಾಲಕಾಲಕ್ಕೆ ಕಾರ್ಯಾಗಾರಗಳನ್ನು ಏರ್ಪಡಿಸಲಾಗುತ್ತದೆ ಎಂದು ಅವರು ಹೇಳಿದರು.

ಬಾಲ್ಯ ವಿವಾಹ ನಿಷೇಧ ಕಾಯ್ದೆ-2006 ಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅಧ್ಯಕ್ಷರು 18 ವರ್ಷದೊಳಗಿನ ಹೆಣ್ಣು ಮಕ್ಕಳು, 21 ವರ್ಷದೊಳಗಿನ ಗಂಡು ಮಕ್ಕಳಿಗೆ ವಿವಾಹವಾದರೆ ಅದು ಬಾಲ್ಯ ವಿವಾಹವಾಗುತ್ತದೆ. ಬಾಲ್ಯ ವಿವಾಹ ನಿಷೇಧ ಕಾಯ್ದೆ-2006 ಅಡಿಯಲ್ಲಿ ಕಾನೂನಿನ ಮೂಲಕ ಶಿಕ್ಷೆ ವಿಧಿಸಲು ಅವಕಾಶವಿದೆ. ಬಾಲ್ಯ ವಿವಾಹ ಆಗುವುದರಿಂದ ದೈಹಿಕವಾಗಿ, ಮಾನಸಿಕವಾಗಿ, ಕೌಟುಂಬಿಕವಾಗಿ ಹಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.

ಬಡತನ, ಮೂಢನಂಬಿಕೆ ಮುಂತಾದ ಕಾರಣಗಳಿಂದ ಬಾಲ್ಯ ವಿವಾಹ ಮಾಡುತ್ತಾರೆ. ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ. ಬಾಲ್ಯ ವಿವಾಹ ತಡೆಯಲು ಶಿಕ್ಷಣ ಪ್ರಮುಖ ಅಸ್ತ್ರ, ಶಿಕ್ಷಣದ ಅರಿವು, ಜ್ಞಾನ ಬೆಳೆಸುತ್ತದೆ. ಶಿಕ್ಷಕರು ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಪರಿಶೀಲಿಸಿ ಹಾಗೂ ಪೋಷಕರ ಸಭೆಯನ್ನು ಕಾಲಕಾಲಕ್ಕೆ ನಡೆಸಿ ಮಕ್ಕಳ ಚಲನವಲನ ಬಗ್ಗೆ ಗಮನ ಹರಿಸಬೇಕು ಎಂದು ಹೇಳಿದರು.

ಬಾಲ್ಯ ವಿವಾಹ, ಮಕ್ಕಳ ಮೇಲಿನ ದೌರ್ಜನ್ಯಗಳು ಕಂಡುಬಂದಲ್ಲಿ ದೂರವಾಣಿ ಸಂಖ್ಯೆ 112 ಅಥವಾ ಚೈಲ್ಡ್ ಲೈನ್ 1098 ಗೆ ಉಚಿತ ದೂರವಾಣಿ ಕರೆ ಮಾಡಿ ದೂರು ನೀಡಿ ಅಥವಾ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ದೂರವಾಣಿ ಸಂಖ್ಯೆಗೆ 080-29560034 ಗೆ ಕರೆ ಮಾಡಿ ದೂರು ನೀಡಬಹುದು ಎಂದು ಅಧ್ಯಕ್ಷರು ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಡಾ.ಶಿವಶಂಕರ ಎನ್ ಅವರು ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿ ವಿವಿಧ ಕಾರಣಗಳಿಂದ ಮಕ್ಕಳ ಮೇಲೆ ದೌರ್ಜನ್ಯಗಳು ಆಗುತ್ತಿವೆ. ಕಾನೂನು ಅಡಿಯಲ್ಲಿ ಮಕ್ಕಳ ರಕ್ಷಣೆ ಆಗಬೇಕು. ದೌರ್ಜನ್ಯ ಎಸಗುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಮಕ್ಕಳ ರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಪ್ರಾಸ್ತಾವಿಕ ಮಾತನಾಡಿದರು.

ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿದ್ದ ಪೋಲಿಸ್ ಮಹಾನಿರ್ದೇಶಕ ಕಚೇರಿಯ ಪೋಲಿಸ್ ತರಬೇತಿದಾರ ರೋಹಿತ್ ಸಿ‌ ಜೆ ಅವರು ಬಾಲನ್ಯಾಯ (ಮಕ್ಕಳ ಪೋಷಣೆ ಮತ್ತು ರಕ್ಷಣೆ) ಕಾಯ್ದೆ- 2015, ಪೋಕ್ಸೋ ಕಾಯ್ದೆ-2012 ಬಗ್ಗೆ ಮಾಹಿತಿ ನೀಡಿದರು.

ಕಾರ್ಯಾಗಾರದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರಾಮ ಮಲ್ಲಯ್ಯ, ಹೊಸಕೋಟೆ ವಿಭಾಗದ ಡಿ.ವೈ.ಎಸ್.ಪಿ ಪಾಟೀಲ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಅನಿತಾ ಲಕ್ಷ್ಮೀ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುನಿಲ್ ಕುಮಾರ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೃಷ್ಣಮೂರ್ತಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಪೋಲಿಸ್ ಇಲಾಖೆ ಸಿಬ್ಬಂದಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು