NEWSನಮ್ಮರಾಜ್ಯರಾಜಕೀಯ

ಆರ್.ವಿ. ದೇವರಾಜ್‌, ಶಿವಶರಣಪ್ಪ ಗೌಡ ಪಾಟೀಲ್‌ರಿಗೆ ಸಂತಾಪ ಸೂಚಿಸಿದ ಸಿಎಂ

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಮಾಜಿ ಶಾಸಕ ಶಿವಶರಣಪ್ಪ ಗೌಡ ಪಾಟೀಲ್ ಅವರು ವಿವಿಧ ಸಂಘ-ಸಂಸ್ಥೆಗಳ ಕಾರ್ಯಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದವರು. ತಾಲೂಕು ಬೋರ್ಡ್ ಅಧ್ಯಕ್ಷರಾಗಿ, ತುಂಗಭದ್ರಾ ಅಣೆಕಟ್ಟು ಮಂಡಳಿ ಹಾಗೂ ಹಟ್ಟಿ ಚಿನ್ನದ ಗಣಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇತ್ತೀಚೆಗೆ ಅಗಲಿದ ಶಿವಶರಣಪ್ಪ ಗೌಡ ಪಾಟೀಲ್ ಅವರಿಗೆ ಇಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಆದರಂಭವಾದ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಂತಾಪ ಸೂಚಿಸಿದರು.

1999ರಲ್ಲಿ ಯಲಬುರ್ಗಾ ವಿಧಾನಸಭಾ ಕ್ಷೇತ್ರದಿಂದ 11ನೇ ವಿಧಾನಸಭೆಗೆ ಚುನಾಯಿತರಾಗಿದ್ದರು. ಕ್ಷೇತ್ರದ ಜನರ ಹಾಗೂ ರೈತರ ಪರವಾಗಿ ಸದಾ ಶ್ರಮಿಸುತ್ತಿದ್ದರು. ಶಿವಶರಣಪ್ಪಗೌಡ ಪಾಟೀಲ್ ನಿಧನದಿಂದ ಒಬ್ಬ ಮುತ್ಸದ್ದಿ ಹಾಗೂ ರೈತರ ಪರ ನಾಯಕನನ್ನು ಕಳೆದುಕೊಂಡಂತಾಗಿದೆ ಎಂದು ಅವರ ಅಗಲಿಕೆಗೆ ಸಂತಾಪ ಸೂಚಿಸಿದರು.

ಆರ್.ವಿ. ದೇವರಾಜ್: ಇನ್ನು ಮಾಜಿ ಶಾಸಕ ಆರ್.ವಿ. ದೇವರಾಜ್ ಅವರು ವೃತ್ತಿಯಲ್ಲಿ ವ್ಯಾಪಾರಸ್ಥರಾಗಿದ್ದರು. ಉತ್ತಮ ಸಂಘಟಕರಾಗಿ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದರು. ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದರು ಎಂದು ಸಿಎಂ ಹೇಳಿದ್ದಾರೆ.

ಅವರು 1989ರ ಚುನಾವಣೆಯಲ್ಲಿ ಮೊದಲ ಬಾರಿಗೆ ಮತ್ತು 1999 ಹಾಗೂ 2013ರಲ್ಲಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದರು. 2004 ರಿಂದ 2010ರ ವರೆಗೆ ವಿಧಾನ ಪರಿಷತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು. ಅಲ್ಲದೇ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಹಾಗೂ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಹೋಗಿದ್ದ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿ ನಿಧನರಾಗಿರುವುದು ಅತ್ಯಂತ ನೋವಿನ ಸಂಗತಿ. ಇತ್ತೀಚೆಗೆ ನನ್ನನ್ನು ಭೇಟಿಯಾಗಿದ್ದ ದೇವರಾಜ್ ಅವರು ಕೆಲವು ವಿಚಾರಗಳ ಬಗ್ಗೆ ಚರ್ಚಿಸಿದ್ದರು. ಅವರ ಅಗಲಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವುಂಟಾಗಿದೆ ಎಂದು ಸಂತಾಪದ ನುಡಿಗಳನ್ನಾಡಿದರು.

Megha
the authorMegha

Leave a Reply

error: Content is protected !!