ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರನ್ನು ತಡರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜ್ವರದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದೆ ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.
ರಾತ್ರಿ 11.30ರ ಸುಮಾರಿಗೆ ಪಾರ್ವತಿ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಕೂಡಲೇ ಅವರನ್ನು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ 9.50ಕ್ಕೇ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಬೇಕಿತ್ತು. ಆದರೆ ಪತ್ನಿ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಅವರ ಆರೋಗ್ಯವನ್ನು ವಿಚಾರಿಸಿಕೊಂಡು ಬಳಿಕ ಬೆಳಗ್ಗೆ 11.30ಕ್ಕೆ ಎಚ್ಎಎಲ್ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಲಿದ್ದಾರೆ.
ಆಸ್ಪತ್ರೆಗೆ ಭೇಟಿ: ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿರುವ ಸಿಎಂ ಸಿದ್ದರಾಮಯ್ಯ ಪತ್ನಿಯ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಪಾರ್ವತಿ ಸಿದ್ದರಾಮಯ್ಯ ಅವರ ಆರೋಗ್ಯ ಸ್ಥಿರವಾಗಿದೆ. ಸದ್ಯ ಅವರು ICU ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ICU ನಿಂದ ವಾರ್ಡ್ಗೆ ಶಿಫ್ಟ್ ಆಗಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.