ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಎಲ್ಲಾ ಎಂಟೂ ವಲಯಗಳಲ್ಲಿ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆಯನ್ನು ಶೀಘ್ರ ಪೂರ್ಣಗೊಳಿಸಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಾಲಿಕೆಯ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಮಲ್ಲೇಶ್ವರಂನ ಐಪಿಪಿ ಕೇಂದ್ರದಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಾದ್ಯಂತ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆಯನ್ನು ನಡೆಸಲಾಗುತ್ತಿದ್ದು, ಎಂಟೂ ವಲಯಗಳಲ್ಲಿ ಇದುವರೆಗೆ 17,423 ವ್ಯಾಪಾರಿಗಳನ್ನು ಗುರುತಿಸಲಾಗಿದೆ. ಈ ಸಂಬಂಧ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆಗೆ ವೇಗ ನೀಡಿ ತ್ವರಿತವಾಗಿ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ವ್ಯಾಪಾರ ವಲಯಗಳ ಸಮೀಕ್ಷೆ ಶೀಘ್ರ ಪೂರ್ಣಗೊಳಿಸಿ: ನಗರಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವ್ಯಾಪಾರ ವಲಯ(Vending Zones)ಗಳನ್ನು ಗುರುತಿಸುವ ಕೆಲಸ ಆಯಾ ವಲಯ ವ್ಯಾಪ್ತಿಯಲ್ಲಿ ನಡೆಸಲಾಗುತ್ತಿದ್ದು, ಶೀಘ್ರವಾಗಿ ವ್ಯಾಪರ ವಲಯಗಳ ಸಮೀಕ್ಷೆಯನ್ನು ಪೂರ್ಣಗೊಳಿಸಿ ವರದಿ ನೀಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಾದಚಾರಿ ಮಾರ್ಗ ಒತ್ತುವರಿ ತೆರವುಗೊಳಿಸಿ: ನಗರದ ಪಾದಚಾರಿ ಮಾರ್ಗಗಳಲ್ಲಿ ಶಾಶ್ವತ ಪೆಟ್ಟಿಗೆಗಳನ್ನು ಅಳವಡಿಸಿಕೊಂಡು ಮಾರಾಟ ಮಾಡುವುಂತಿಲ್ಲ. ಈ ನಿಟ್ಟಿನಲ್ಲಿ ಎಲ್ಲೆಲ್ಲಿ ಶಾಶ್ವತ ಪೆಟ್ಟಿಗೆಗಳನ್ನಿಟ್ಟುಕೊಂಡು ಮಾರಾಟ ಮಾಡುತ್ತಿದ್ದಾರೆ ಅಲ್ಲಿ ಕೂಡಲೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಬೇಕು. ಪಾದಚಾರಿಗಳ ಓಡಾಟಕ್ಕೆ ಯಾವುದೇ ಸಮಸ್ಯೆಯಾಗಂತೆ ಸುಗಮ ಓಡಾಟಕ್ಕೆ ಅನುವು ಮಾಡಿಕೊಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಆಸ್ತಿ ತೆರಿಗೆ ಸಂಗ್ರಹ ಹೆಚ್ಚಳ ಮಾಡಿ: ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹಿಸುವ ಸಲುವಾಗಿ ಸೂಕ್ತ ಕ್ರಮಗಳನ್ನು ಕೈಗೊಂಡು, ಆಯಾ ವಲಯ ವ್ಯಾಪ್ತಿಯಲ್ಲಿ ಹೆಚ್ಚು ಬಾಕಿ ಉಳಿಸಿಕೊಂಡಿರುವ ಸುಸ್ತಿದಾರರಿಂದ ಕೂಡಲೇ ಆಸ್ತಿ ತೆರಿಗೆಯನ್ನು ವಸೂಲಿ ಮಾಡಲು ಸೂಚನೆ ನೀಡಿದರು.
ಈ ವೇಳೆ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್, ಸುರಳ್ಕರ್ ವಿಕಾಸ್ ಕಿಶೋರ್, ಡಾ. ಕೆ. ಹರೀಶ್ ಕುಮಾರ್, ಅವಿನಾಶ್ ಮೆನನ್ ರಾಜೇಂದ್ರನ್, ವಲಯ ಆಯುಕ್ತ ವಿನೋತ್ ಪ್ರಿಯಾ, ಸತೀಶ್, ಅರ್ಚನಾ, ಸ್ನೇಹಲ್, ಗಿರೀಶ್, ರಮೇಶ್, ಕರೀಗೌಡ, ಪ್ರಧಾನ ಅಭಿಯಂತರರು, ಎಲ್ಲ ವಲಯ ಮುಖ್ಯ ಅಭಿಯಂತರರು ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.