
ಬೆಂಗಳೂರು: ಕನಿಷ್ಠ ಹೆಚ್ಚುವರಿ ಪಿಂಚಣಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಗಮನ ಸೆಳೆಯಲು ಮಾರ್ಚ್ 23 ರಂದು ಬೆಳಗಾವಿ ಸಮಾವೇಶ ಹಾಗೂ ಮಾ.25 ರಂದು ಬೆಂಗಳೂರಿನ ರಿಚ್ಮಂಡ್ ವೃತ್ತದಲ್ಲಿರುವ ಇಪಿಎಫ್ಒ ಕಚೇರಿ ಆವರಣದಲ್ಲಿ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಈ ಸಂಬಂಧ ರಾಷ್ಟ್ರೀಯ ಸಂಘರ್ಷ ಸಮಿತಿ ಮುಖ್ಯಸ್ಥ ಕಮಾಂಡರ್ ಅಶೋಕ್ ರಾಹುತ್ ಅವರು ದೇಶಾದ್ಯಂತ ಎಲ್ಲ ಇಪಿಎಸ್ ಪಿಂಚಣಿದಾರರಿಗೆ ಕರೆ ನೀಡಿ, ಕೆಲವೊಂದು ಮಾರ್ಗಸೂಚಿಗಳನ್ನು ನೀಡಿದ್ದಾರೆ ಎಂದು ಬಿಎಂಟಿಸಿ & ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ನಂಜುಂಡೇಗೌಡ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪಾರ್ಲಿಮೆಂಟ್ ಬಜೆಟ್ ಅಧಿವೇಶನ ಏ.4ರವರೆಗೆ ಚಾಲ್ತಿಯಲ್ಲಿದ್ದು, ಈ ಸಂದರ್ಭದಲ್ಲಿ ನಮ್ಮ ಕನಿಷ್ಠ ಹೆಚ್ಚುವರಿ ಪಿಂಚಣಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ, ಪ್ರಧಾನಮಂತ್ರಿಯವರ ಕಾರ್ಯಾಲಯಕ್ಕೆ ಜಿಲ್ಲಾಧಿಕಾರಿಯವರ ಮುಖಾಂತರ ಮನವಿ ಪತ್ರವನ್ನು ಪ್ರತಿ ಜಿಲ್ಲೆಯಿಂದಲೂ ಸಲ್ಲಿಸಬೇಕು ಎಂದು ಕರೆ ನೀಡಿದ್ದಾರೆ.
ಇದರ ಜತೆಗೆ ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಖಾತೆ ( minister for labour & employment) ಸಚಿವ ಮುನ್ಸುಖ್ ಮಾಂಡವೀಯ ಅವರಿಗೆ ಇಪಿಎಫ್ಒ ಅಧಿಕಾರಿಗಳ ಮೂಲಕ ಮನವಿ ಪತ್ರವನ್ನು ಕಳುಹಿಸಿಕೊಡಬೇಕೆಂದು ಸೂಚಿಸಿದ್ದು, ಮತ್ತೊಂದು ಮನವಿಯನ್ನು ತಮ್ಮ ಕ್ಷೇತ್ರದ ಸಂಸತ್ ಸದಸ್ಯರಿಗೆ ನೀಡಿ, ಪಾರ್ಲಿಮೆಂಟ್‌ನಲ್ಲಿ ಇಪಿಎಸ್ ನಿವೃತ್ತರ ಪರ ಧ್ವನಿ ಎತ್ತಬೇಕೆಂದು ಮನವಿ ಮಾಡಿದ್ದು ಅದಕ್ಕಾಗಿ ನಾವೆಲ್ಲರೂ ಸಮಾವೇಶಗೊಳ್ಳಬೇಕಿದೆ ಎಂದು ತಿಳಿಸಿದ್ದಾರೆ.
ಈ ಹಿನ್ನೆಲೆ ಕರ್ನಾಟಕ ಸಕ್ಕರೆ ಕಾರ್ಖಾನೆಗಳ ಇಪಿಎಸ್ ನಿವೃತ್ತರ ಬೃಹತ್ ಸಮಾವೇಶ ಬೆಳಗಾವಿ ನಗರದ ಭಾಗ್ಯನಗರದಲ್ಲಿ ಮಾ.23, 2025ರ ಭಾನುವಾರ ಬೆಳಗ್ಗೆ 10:30ಕ್ಕೆ ಜರುಗಲಿದ್ದು, ರಾಷ್ಟ್ರೀಯ ಹಾಗೂ ರಾಜ್ಯ ಮುಖಂಡರು ಒಳಗೊಂಡಂತೆ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ನಿವೃತ್ತರು, ಗಡಿ ಭಾಗ ಮಹಾರಾಷ್ಟ್ರದಿಂದಲೂ ಸಹ ಸಾವಿರಾರು ನಿವೃತ್ತರು, ಈ ಸಮಾವೇಶಕ್ಕೆ ಆಗಮಿಸಲಿದ್ದಾರೆ.
ಈ ಮೂಲಕ ಇಪಿಎಸ್ ನಿವೃತ್ತರ ಶಕ್ತಿ ಪ್ರದರ್ಶನ ನಡೆಯಲಿದೆ. ಕೇಂದ್ರ ಸರ್ಕಾರಕ್ಕೆ ಇದೊಂದು ಎಚ್ಚರಿಕೆ ಗಂಟೆಯಾಗಲಿದೆ ಎಂದು ತಿಳಿಸಿರುವ ನಂಜುಂಡೇಗೌಡ, ಮುಂದುವರೆದಂತೆ ಇದೇ ಮಾ.25ರ ಮಂಗಳವಾರ ಬೆಳಗ್ಗೆ 11:30ಕ್ಕೆ ಬೆಂಗಳೂರಿನ ರಿಚ್ಮಂಡ್ ವೃತ್ತದ ಇಪಿಎಫ್ಒ ಕಚೇರಿ ಆವರಣದಲ್ಲಿ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಇನ್ನು ಈ ಬೃಹತ್ ಪ್ರತಿಭಟನಾ ಸಭೆಗೆ ರಾಷ್ಟ್ರೀಯ ಸಂಘರ್ಷ ಸಮಿತಿ, ಬಿಎಂಟಿಸಿ & ಕೆಎಸ್‌ಆರ್‌ಟಿಸಿ ಹಾಗೂ ಚಿಕ್ಕಬಳ್ಳಾಪುರ ಕೆಎಸ್ಆರ್‌ಟಿಸಿ ಕ್ಷೇಮಾಭಿವೃದ್ಧಿ ಟ್ರಸ್ಟ್ ವತಿಯಿಂದ ಇಪಿಎಸ್ ಪಿಂಚಣಿದಾರರ ವಿನೂತನ ಪ್ರತಿಭಟನಾ ಸಭೆ ಹಾಗೂ ಮನವಿ ಪತ್ರ ಸಲ್ಲಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಈ ಸಭೆಗೆ ರಾಜ್ಯಾದ್ಯಂತ ಇರುವ ಎಲ್ಲ ಇಪಿಎಸ್ ನಿವೃತ್ತರು ಭಾಗವಹಿಸುವ ನಿರೀಕ್ಷೆ ಇದೆ. ರಾಷ್ಟ್ರೀಯ ಸಂಘರ್ಷ ಸಮಿತಿ ಮುಖ್ಯ ಸಂಯೋಜಕ ರಮಕಾಂತ ನರಗುಂದ ಹಾಗೂ ರಾಜ್ಯಾಧ್ಯಕ್ಷ ಜೆಎಸ್ಎಂ ಸ್ವಾಮಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಕಾಲ/ ಬದುಕು ಕಳೆದುಹೋಗುವ ಮುನ್ನ ನಾವು ಎಚ್ಚೆತ್ತುಕೊಂಡು, ಸ್ಪಷ್ಟ ಸಂದೇಶವನ್ನು ಕೇಂದ್ರ ಸರ್ಕಾರಕ್ಕೆ ನೀಡೋಣ ಎಂದು ಕರೆ ನೀಡಿದ್ದಾರೆ.
ಇನ್ನು ಬೆಳಗಾವಿಯಲ್ಲಿ ಜರುಗುವ ಅಭೂತಪೂರ್ವ ಸಮಾವೇಶ ಬೆಂಗಳೂರಿನ ಬೃಹತ್ ಪ್ರತಿಭಟನಾ ಸಭೆ ಹಾಗೂ ಸಂಸದರಿಗೆ ಮನವಿ ಪತ್ರ ಸಲ್ಲಿಸುವ ಕಾರ್ಯಕ್ರಮ, ಈ ಮೂರು ಕಾರ್ಯಕ್ರಮಗಳನ್ನು ರಾಜ್ಯಾದ್ಯಂತ ಇರುವ ಎಲ್ಲ ಇಪಿಎಸ್ ನಿವೃತ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಯಶಸ್ವಿಗೊಳಿಸಬೇಕೆಂದು ನಂಜುಂಡೇಗೌಡ ಮನವಿ ಮಾಡಿದ್ದಾರೆ.
