ಬೆಂಗಳೂರು: ನಮ್ಮ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಬಿಜೆಪಿಯ ದ್ವೇಷ ರಾಜಕಾರಣ ಖಂಡಿಸಿ ಇದೇ ಜುಲೈ 12ರಂದು ದೇಶಾದ್ಯಂತ ಪ್ರತಿಭಟನೆ ನಡೆಸಲುದ್ದೇಶಿಸಲಾಗಿದೆ. ಇದರ ಭಾಗವಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಂದು ಮೌನ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಇಂದು ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಹಮ್ಮಿಕೊಂಡಿರುವ ಮೌನ ಪ್ರತಿಭಟನೆಗೆ ರಾಜ್ಯದ ಕಾಂಗ್ರೆಸ್ ಕಾರ್ಯಕರ್ತರು, ನಾಯಕರು, ಮುಖಂಡರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರೂ ಸೇರಿದಂತೆ ಎಲ್ಲರೂ ಪಾಲ್ಗೊಳ್ಳಬೇಕೆಂದು ತಿಳಿಸಿದರು.
ರಾಹುಲ್ ಗಾಂಧಿ ಅವರ ವಿರುದ್ಧ ದ್ವೇಷ ರಾಜಕಾರಣ ಮಾಡುತ್ತಿರುವ ಕೇಂದ್ರ ಬಿಜೆಪಿ ಸರ್ಕಾರವು ಸಂವಿಧಾನದ ಚೌಕಟ್ಟುಗಳನ್ನು ಮೀರಿ ಉದ್ದೇಶಪೂರಿತವಾಗಿ ಅವರನ್ನು ಸಂಸದ ಸ್ಥಾನದಿಂದ ವಜಾಗೊಳಿಸಿದೆ ಎಂದು ಕಿಡಿಕಾರಿದರು.
ಇನ್ನು ದೇಶದಲ್ಲಿ ಶಾಂತಿ ಮೂಡಿಸುವ ಹಾಗೂ ದೀನ ದಲಿತರ ಧನಿಯಾಗುವ ನಿಟ್ಟಿನಲ್ಲಿ ಭಾರತ್ ಜೋಡೋ ಪಾದಯಾತ್ರೆ ಮೂಲಕ ಮೂರು ಸಾವಿರ ಕಿಲೋಮೀಟರ್ ಪಾದಯಾತ್ರೆ ನಡೆಸಿದ ರಾಹುಲ್ ಅವರ ರಾಜಕೀಯ ಬೆಳವಣಿಗೆ ಸಹಿಸದೆ ಬಿಜೆಪಿ ಇಂಥ ಕುತಂತ್ರ ನಡೆಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.