ಬಾಗಲಕೋಟೆ: ಚಾಲಕ ನಿಯಂತ್ರಣ ತಪ್ಪಿದ ಸಾರಿಗೆ ಬಸ್ ಕಂದಕಕ್ಕೆ ಉರುಳಿದ್ದು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.
ಇಂದು ಜಿಲ್ಲೆ ರಬಕವಿ ಬನಹಟ್ಟಿ ತಾಲೂಕಿನ ಹಿಪ್ಪರಗಿ ಸೇತುವೆ ಬಳಿ ಈ ದುರ್ಘಟನೆ ಸಂಭವಿಸಿದ್ದು, ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದಂತಾಗಿದೆ.
ಅಥಣಿಯಿಂದ ಜಮಖಂಡಿ ಕಡೆಗೆ ಬರುತ್ತಿದ್ದ ಸಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ. ಈ ವೇಳೆ ಬಸ್ನಲ್ಲಿದ್ದ ಏಳೆಂಟು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ತಿಳಿದು ಬಂದಿದೆ.
ಇನ್ನು ಅಪಘಾತ ಸಂಭವಿಸಿದ್ದನ್ನು ನೋಡಿದ ಸ್ಥಳೀಯರು ಕೂಡಲೇ ಸ್ಥಳಕ್ಕೆ ಧಾವಿಸಿ ಬಸ್ನ ಹಿಂಬದಿಯ ಗಾಜು ಒಡೆದು ಪ್ರಯಾಣಿಕರನ್ನು ರಕ್ಷಿಸಿದ್ದಾರೆ.
ಗಾಯಗೊಂಡ ಪ್ರಯಾಣಿಕರನ್ನು ಜಮಖಂಡಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಿದ್ದು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ರೋಡ್ಹಂಪ್ ಹತ್ತಿ ಇಳಿಯುವ ವೇಳೆ ಬಸ್ಸಿನ ಪಾಟಾ ಮುರಿದಿದ್ದೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ.
ಇತ್ತೀಚೆಗೆ ರೋಡ್‌ನಲ್ಲಿ ರಸ್ತೆ ಡುಬ್ಬವನ್ನು ಅವೈಜ್ಞಾನಿಕವಾಗಿ ಹಾಕುತ್ತಿರುವುದರಿಂದ ಹಲವು ಅಪಘಾತಗಳಿಗೆ ಕಾರಣವಾಗುತ್ತಿದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಗಮನಹರಿಸಿ ಅವೈಜ್ಞಾನಿಕವಾಗಿ ಹಾಕಿರುವ ರಸ್ತೆ ಡುಬ್ಬಗಳನ್ನು ತೆರವುಗೊಳಿಸಿ ವೈಜ್ಞಾನಿಕವಾದ ರಸ್ತೆ ಉಬ್ಬುಗಳನ್ನು ಅಳವಡಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Related

 










