ಬೆಂಗಳೂರು: ಸಂತೆಗೆ ಜಾನುವಾರು ಸಾಗಿಸುತ್ತಿದ್ದ ವಾಹನದ ಮೇಲೆ ದಾಳಿ ಮಾಡಿ ವಾಹನ ಚಾಲಕನ ಕೊಲೆ ಆರೋಪದ ಮೇಲೆ ಬಂಧಿತವಾಗಿರುವ ಹಿಂದುತ್ವ ಸಂಘಟನೆ ರಾಷ್ಟ್ರ ರಕ್ಷಣಾ ಪಡೆಯ ಪುನೀತ್ ಕೆರೆಹಳ್ಳಿ ಸೇರಿದಂತೆ ಐವರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.
ವಾಹನ ಚಾಲಕ ಇದ್ರೀಸ್ ಪಾಷಾ ಕೊಲೆ ಪ್ರಕರಣದಲ್ಲಿ ಈ ಐವರನ್ನು ಬಂಧಿಸಲಾಗಿತ್ತು. ಈ ಆರೋಪಿಗಳಾದ ಪುನೀತ್ ಕೆರೆಹಳ್ಳಿ, ಗೋಪಿ, ಸುರೇಶ್, ಪವನ್ ಕುಮಾರ್ ಎ.ಎನ್.ಪಿ ಲಿಂಗಪ್ಪ ಎಂಬುವವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಇದ್ರೀಸ್ ಪಾಷಾ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ತನಿಖೆ ಪೂರ್ಣಗೊಂಡಿದ್ದು, ಆರೋಪಿಗಳನ್ನು ಕಸ್ಟಡಿಗೆ ಪಡೆದು ವಿಚಾರಣೆಯನ್ನೂ ಪೂರ್ಣಗೊಳಿಸಲಾಗಿದೆ. ಇನ್ನು ಚಾರ್ಜ್ ಶೀಟ್ ಸಲ್ಲಿಕೆಯಾಗಿ ವಿಚಾರಣೆ ನಡೆಯಬೇಕಿರುವುದರಿಂದ ಜಾಮೀನು ಮಂಜೂರು ಮಾಡಬೇಕು ಎಂದು ಅರ್ಜಿದಾರರ ಪರ ವಕೀಲರು ವಾದಿಸಿ ಮನವಿ ಮಾಡಿದರು.
ಆರೋಪಿಗಳ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಉಮಾ ಅವರ ರಜಾಕಾಲದ ಏಕಸದಸ್ಯ ಪೀಠ ವಾದ ಪ್ರತಿವಾದವಾದನ್ನು ಆಲಿಸಿದ ಬಳಿಕ ಆರೋಪಿಪರ ವಕೀಲರ ಮನವಿಯನ್ನು ಪುರಸ್ಕರಿಸಿದ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ
ರಾಮನಗರ ಜಿಲ್ಲೆಯ ಕನಕಪುರದ ಸಾತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾರ್ಚ್31 ರಂದು ಜಾನುವಾರು ಸಾಗಾಟ ವಾಹನದ ಚಾಲಕ ಮಂಡ್ಯದ ಗುತ್ತಲು ನಿವಾಸಿ ಇದ್ರೀಸ್ ಪಾಷಾ ಎಂಬುವವರನ್ನು ಹತ್ಯೆ ಮಾಡಲಾಗಿತ್ತು.
ಈ ಸಂಬಂಧ ಪುನೀತ್ ಕೆರೆಹಳ್ಳಿ ಮತ್ತು ಇತರ ನಾಲ್ವರ ವಿರುದ್ಧ ಸಾತನೂರು ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 341, 504, 506, 324, 302, 304 ಅಡಿ ಪ್ರಕರಣ ದಾಖಲಾಗಿದೆ.