ಹನೂರು: ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸುವಂತೆ ಚಿಂಚಳ್ಳಿ ಗ್ರಾಮಸ್ಥರು ಮನವಿ ಸಲ್ಲಿಸಿದರು ಸಹ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಎಂದು KSRTC ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಾಲೂಕಿನ ಚಿಂಚಳ್ಳಿ ಗ್ರಾಮವೂ ತಾಲೂಕು ಕೇಂದ್ರ ದಿಂದ 5.5ಕಿಲೋಮೀಟರ್ ಇದ್ದರೂ ಸಹ ಸಮರ್ಪಕವಾಗಿ ಬಸ್ ಸೌಲಭ್ಯ ಇಲ್ಲ. ಸಾರ್ವಜನಿಕರ ಅನುಕೂಲಕ್ಕೆ ಇಲ್ಲದ ಈ ಸಾರಿಗೆ ವ್ಯವಸ್ಥೆ ಮತ್ತ್ಯಾರಿಗಾಗಿ ಇದೆ ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ.
ಇನ್ನು ಗ್ರಾಮಕ್ಕೆ ಸಮರ್ಪಕವಾಗಿ ಬಸ್ ಇಲ್ಲದ ಪರಿಣಾಮ ಶಾಲಾ ಮಕ್ಕಳು ಹಾಗೂ ಗ್ರಾಮಸ್ಥರು ಹರ ಸಾಹಸ ಪಡಬೇಕಾದ ಪರಿಸ್ಥಿತಿ ಉಂಟಾಗಿದೆ. ಸುಮಾರು 200ಮಕ್ಕಳು ತಾಲೂಕು ಕೇಂದ್ರವಾದ ಹನೂರು ಹಾಗೂ ಕೊಳ್ಳೇಗಾಲಕ್ಕೆ ವಿದ್ಯಾಭ್ಯಾಸಕ್ಕೆ ಹೋಗುತ್ತಿದ್ದಾರೆ. ಆದ್ದರಿಂದ ಸರಿಯಾದ ಸಮಯಕ್ಕೆ ಬಸ್ ಸೌಲಭ್ಯ ಕಲ್ಪಿಸಿ ಎಂದು ಆಗ್ರಹಿಸಿದ್ದಾರೆ.
ಈ ವೇಳೆ ಚಿಂಚಳ್ಳಿ ಗ್ರಾಮದ ಮುಖಂಡರೊಬ್ಬರು ಮಾತನಾಡಿ ಚಿಂಚಳ್ಳಿ ಗ್ರಾಮಕ್ಕೆ ಬಸ್ ಸೌಲಭ್ಯ ಕಲ್ಪಿಸುವಂತೆ ಮೂರು ಬಾರಿ ಘಟಕ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಲಾಗಿದೆ. ಆದರೆ ಇದುವರೆಗೂ ಬಸ್ ಸೌಲಭ್ಯ ಕಲ್ಪಿಸಿಲ್ಲ. ಈ ಸಂಬಂಧ ಡಿಪೋ ಮ್ಯಾನೇಜರ್ ಅವರಿಗೆ ಕರೆ ಮಾಡಿದರೆ ಸ್ವೀಕರಿಸುತ್ತಿಲ್ಲ. ಅಧಿಕಾರಿಗಳು ಮೀನಮೇಷ ಎಣಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತ ಪಡಿಸಿದರು.
ಈ ಬಗ್ಗೆ ಡಿಪೋ ಅಧಿಕಾರಿಗಳಿಗೆ ಮನವಿ ಮಾಡಿದರು ಸಹ ಕ್ಯಾರೇ ಎನ್ನುತ್ತಿಲ್ಲ. ಸಾರ್ವಜನಿಕರ ಸಮಸ್ಯೆ ಬಗೆಹರಿಸದೆ ಇದೇ ರೀತಿ ನಡೆದುಕೊಂಡು, ಸಮರ್ಪಕ ಬಸ್ ಸೌಲಭ್ಯ ಒದಗಿಸದಿದ್ದರೆ ಮುಂದಿನ ದಿನಗಳಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಬೇಕಾಗುತ್ತದೆ ಎದು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.