ಬೆಂಗಳೂರು: ಪಂಜಾಬ್‌ನ ಪಟಿಯಾಲ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಶುಕ್ರವಾರ ಕರ್ನಾಟಕದ ರೈತ ನಾಯಕ ಕುರುಬೂರು ಶಾಂತಕುಮಾರ್ ಅವರು ತೀವ್ರವಾಗಿ ಗಾಯಗೊಂಡಿದ್ದು, ಅವರು ಪಟಿಯಾಲದಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹೀಗಾಗಿ ರಾಜ್ಯ ಸರ್ಕಾರ ಅವರ ನೆರವಿಗೆ ಧಾವಿಸಿದ್ದು, ಕುರುಬೂರು ಶಾಂತಕುಮಾರ್ ಅವರನ್ನು ಪಂಬಾಜ್‌ನಿಂದ ಬೆಂಗಳೂರಿಗೆ ಕರೆತರಲು ಸೂಕ್ತ ವ್ಯವಸ್ಥೆ ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ತೀವ್ರವಾಗಿ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆತರಲು ನಮ್ಮ ಸರ್ಕಾರ ವ್ಯವಸ್ಥೆ ಮಾಡಿದೆ. ಏರ್ ಆಂಬುಲೆನ್ಸ್ ಮೂಲಕ ಶಾಂತಕುಮಾರ್ ಅವರನ್ನು ಚಂಡೀಗಡದಿಂದ ಬೆಂಗಳೂರಿಗೆ ಕರೆತಂದು ಮಣಿಪಾಲ್ ಆಸ್ಪತ್ರೆಗೆ ದಾಖಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಅಧಿಕಾರಿಗಳು ಏರ್ ಆಂಬುಲೆನ್ಸ್ ವ್ಯವಸ್ಥೆ ಮಾಡಿದ್ದಾರೆ. ಶೀಘ್ರದಲ್ಲೇ ಅವರನ್ನು ಬೆಂಗಳೂರಿಗೆ ಕರೆತಂದು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಿದ್ದಾರೆ. ಇನ್ನು ಈ ಅಪಘಾತದಲ್ಲಿ ಶಾಂತಕುಮಾರ್ ಅವರ ಬೆನ್ನು ಮೂಳೆಗೆ ಗಂಭೀರ ಗಾಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ದೆಹಲಿಯಿಂದ ಕನೂರಿಯಲ್ಲಿ ಆಯೋಜಿಸಿದ್ದ ರೈತರ ಸಭೆಗೆ ತೆರಳುತ್ತಿದ್ದಾಗ ಪಂಜಾಬ್‌ನಲ್ಲಿ ಶಾಂತಕುಮಾರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿತ್ತು.