ಬೆಂಗಳೂರು: ಜೆಡಿಎಸ್ ಎನ್‌ಡಿಎ ಮೈತ್ರಿಕೂಟಕ್ಕೆ ಸೇರಿದ ಬೆನ್ನಲ್ಲೇ ನಿಖಿಲ್ ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ.
ನಗರದ ಡಾಲರ್ಸ್ ಕಾಲೋನಿ ನಿವಾಸಕ್ಕೆ ಆಗಮಿಸಿದ ನಿಖಿಲ್ ಕುಮಾರಸ್ವಾಮಿ, ಯಡಿಯೂರಪ್ಪ ಅವರಿಗೆ ಹೂಗುಚ್ಛ ನೀಡಿ, ಶಾಲು ಹೊದಿಸಿ ಗೌರವಿಸಿದರು. ಆರ್.ಆರ್. ನಗರ ಶಾಸಕ ಮುನಿರತ್ನ ನಿಖಿಲ್‌ಗೆ ಸಾಥ್ ನೀಡಿದರು.
ಯಡಿಯೂರಪ್ಪ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಿಖಿಲ್, ಎನ್‌ಡಿಎ ಮೈತ್ರಿಕೂಟಕ್ಕೆ ಜೆಡಿಎಸ್ ಬೆಂಬಲ ನೀಡಿದೆ. ಬಿಜೆಪಿ-ಜೆಡಿಎಸ್ ಜಂಟಿಯಾಗಿ ಲೋಕಸಭೆ ಚುನಾವಣೆ ಎದುರಿಸಲಿದೆ. ದೇವೇಗೌಡರು ರಾಜ್ಯದ ಹಿತದೃಷ್ಟಿಯಿಂದ ಈ ನಿರ್ಧಾರ ಮಾಡಿದ್ದಾರೆ ಎಂದು ತಿಳಿಸಿದರು.
ಇನ್ನು ರಾಜ್ಯಕ್ಕೆ ಯಡಿಯೂರಪ್ಪನವರ ಕೊಡುಗೆ ಅಪಾರ. ಹಿರಿಯರ ಆಶೀರ್ವಾದ ಪಡೆದುಕೊಳ್ಳುವುದು ನಮ್ಮ ಸಂಸ್ಕೃತಿ. ಹಾಗಾಗಿ, ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದೇನೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ 28 ಕ್ಕೆ 28 ಕ್ಷೇತ್ರಗಳನ್ನೂ ಗೆಲ್ಲಲಿದೆ ಎಂದರು.
ಜೆಡಿಎಸ್ ಪ್ರಾದೇಶಿಕ ಪಕ್ಷವನ್ನು ಅನೇಕರು ಶ್ರಮವಹಿಸಿ ಕಟ್ಟಿದ್ದಾರೆ. ನಮ್ಮ ನಾಯಕರು ಪಕ್ಷವನ್ನು ಮುನ್ನಡೆಸಿದ್ದಾರೆ. ಇದೀಗ ಯುವಕರು ಪಕ್ಷದ ಜವಾಬ್ದಾರಿ ಹೊತ್ತುಕೊಳ್ಳುವ ಅನಿವಾರ್ಯತೆ ಬಂದಿದೆ. ಹಾಗಾಗಿ, ನಾನು ಓಡಾಡುತ್ತಿದ್ದೇನೆ. ಪಕ್ಷ ಯಾವುದೇ ಜವಾಬ್ದಾರಿ ಕೊಟ್ಟರೂ ನಿರ್ವಹಿಸುತ್ತೇನೆ ಎಂದು ಹೇಳಿದರು.
ಲೋಕಸಭೆ ಚುನಾವಣೆಗೆ ಮಂಡ್ಯ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕುರಿತು ಕೇಳಿದ ಪ್ರಶ್ನೆಗೆ, ಮಂಡ್ಯ ಚುನಾವಣೆ ಬಗ್ಗೆ ಮಾತನಾಡಲು ಇದು ಸೂಕ್ತ ಸಮಯವಲ್ಲ. ಅಲ್ಲಿನ ಮಾಜಿ ಶಾಸಕರು, ಪಕ್ಷದ ನಾಯಕರು ಈ ಬಗ್ಗೆ ತೀರ್ಮಾನ ಮಾಡ್ತಾರೆ. ಮಂಡ್ಯದಲ್ಲಿ ಅಭ್ಯರ್ಥಿಗಳಿಗೆ ಕೊರತೆಯಿಲ್ಲ ಎಂದರು.
ಕೆಲ ದಿನಗಳ ಹಿಂದೆ ಮಾತಾನಾಡಿದ್ದ ಎಚ್.ಡಿ ಕುಮಾರಸ್ವಾಮಿ, ನಿಖಿಲ್‌ಗೆ ರಾಜಕೀಯದಿಂದ ದೂರ ಇರುವಂತೆ ಸೂಚಿಸಿದ್ದೇನೆ. ಸಿನಿಮಾದಲ್ಲಿ ಭವಿಷ್ಯ ಕಟ್ಟಿಕೊಳ್ಳುವಂತೆ ಸಲಹೆ ನೀಡಿದ್ದೇನೆ ಎಂದಿದ್ದರು.
ಆದರೆ, ಜೆಡಿಎಸ್ ಎನ್‌ಡಿಎ ಮೈತ್ರಿಕೂಟಕ್ಕೆ ಸೇರಿದ ಬೆನ್ನೆಲ್ಲೇ ಕುಮಾರಸ್ವಾಮಿಯ ಎಲ್ಲ ಪ್ರವಾಸದಲ್ಲೂ ನಿಖಿಲ್ ಭಾಗಿಯಾಗುತ್ತಿದ್ದಾರೆ. ಮೂಲಗಳ ಪ್ರಕಾರ, ಲೋಕಸಭಾ ಚುನಾವಣೆಯಿಂದ ಹಿಂದೆ ಸರಿದಿರುವ ನಿಖಿಲ್, ಮುಂದಿನ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ತಯಾರಿ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.