ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಸ್ಪರ್ಧೆ ಬಹುತೇಕ ಖಚಿತ !
ಮಂಡ್ಯ: ಲೋಕಸಭಾ ಚುನಾವಣೆಗಾಗಿ ಮೈತ್ರಿ ಮಾಡಿಕೊಂಡ ಬಿಜೆಪಿ ಹಾಗೂ ಜೆಡಿಎಸ್ ನಡುವೆ ಕ್ಷೇತ್ರ ಹಂಚಿಕೆ ಅಂತಿಮವಾಗಿದೆ. ಬಿಜೆಪಿಗೆ 25 ಹಾಗೂ ಜೆಡಿಎಸ್ ಮೂರು ಕ್ಷೇತ್ರಗಳನ್ನ ಬಿಜೆಪಿ ಬಿಟ್ಟು ಕೊಟ್ಟಿದೆ.
ಮಂಡ್ಯ, ಹಾಸನ ಹಾಗೂ ಕೋಲಾರ ದಳಪತಿಗಳ ಕೈ ಸೇರಿದೆ. ಸದ್ಯ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮತ್ತೆ ಹಿಡಿತವನ್ನು ಸಾಧಿಸುವ ನಿಟ್ಟಿನಲ್ಲಿ ದಳಪತಿಗಳು ಮುಂದಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರನ್ನು ಮಂಡ್ಯದಿಂದ ಕಣಕ್ಕಿಳಿಸುವುದರಿಂದ ಹಳೇ ಮೈಸೂರು ಭಾಗದಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲು ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ಸಾಧ್ಯವಾಗಬಹುದು ಎಂಬ ಲೆಕ್ಕಾಚಾರ ಬಿಜೆಪಿಯದ್ದು.
ಇನ್ನು ಜೆಡಿಎಸ್ ಅಭ್ಯರ್ಥಿಯಾಗಿ ಮಂಡ್ಯದಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದ್ದು, ಇಂದು ಸಂಜೆಯೊಳಗೆ ಅಧಿಕೃತ ನಿರ್ಧಾರ ಪ್ರಕಟಿಸಲಿದ್ದಾರೆ.
ಹೃದಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿಸಿಕೊಂಡು ಬೆಂಗಳೂರಿಗೆ ವಾಪಸಾದ ಕುಮಾರಸ್ವಾಮಿ ಅವರಿಗೆ ಶುಭ ಹಾರೈಸಲು ರಾಜ್ಯದ ವಿವಿಧೆಡೆಯಿಂದ ಅಭಿಮಾನಿಗಳು ಅವರ ಮನೆ ಮುಂದೆ ಭಾನುವಾರ ಜಮಾಯಿಸಿದ್ದರು. ಈ ವೇಳೆ ನಾನು ಈ ಬಾರಿ ನಿಮಗೆ ನಿರಾಸೆ ಮಾಡಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಮಂಡ್ಯ ಕ್ಷೇತ್ರದಿಂದ ಕುಮಾರಸ್ವಾಮಿ ಅವರೇ ಸ್ಪರ್ಧೆ ಮಾಡಬೇಕು ಎಂದು ಮಂಡ್ಯದ ಕಾರ್ಯಕರ್ತರು, ಅಭಿಮಾನಿಗಳು ಕ್ಷೇತ್ರದಿಂದ ಸ್ಪರ್ಧಿಸುವಂತೆ ಒತ್ತಡ ತಂದ್ದಾರೆ. ಈ ಕುರಿತು ಪಕ್ಷದ ನಾಯಕರ ಜತೆಗೆ ಕುಮಾರಸ್ವಾಮಿ ಅವರು ಚರ್ಚೆ ನಡೆಸಿ ಅಂತಿಮ ತೀರ್ಮಾನಕ್ಕೆ ಬಂದಿದ್ದಾರೆ ಎನ್ನಲಾಗಿದೆ.
ಮಂಡ್ಯದೊಂದಿಗಿನ ಭಾವನಾತ್ಮಕ ಸಂಬಂಧ ಹಾಗೂ ಅಲ್ಲಿನ ಜನರ ಪ್ರೀತಿ, ವಿಶ್ವಾಸ ಸಿಕ್ಕರುವ ಬಗ್ಗೆಯೂ ಭಾವನಾತ್ಮಕವಾಗಿ ಮಾತನಾಡಿದ್ದು, ಅಲ್ಲಿಗೆ ಪ್ರತಿಷ್ಠಿತ ಮಂಡ್ಯದಿಂದ ಕುಮಾರಸ್ವಾಮಿ ಕಣಕ್ಕಿಳಿಯುವುದು ಫಿಕ್ಸ್ ಎನ್ನಲಾಗುತ್ತಿದೆ.
ಆರಂಭದಲ್ಲಿ ಜೆಡಿಎಸ್ ನಾಯಕ ಸಿ.ಎಸ್.ಪುಟ್ಟರಾಜು ಅವರನ್ನು ಮಂಡ್ಯ ಅಭ್ಯರ್ಥಿಯನ್ನಾಗಿ ಜೆಡಿಎಸ್ ಮಾಡಲಿದೆ ಎನ್ನುವ ಚರ್ಚೆ ನಡೆಯುತ್ತಿತ್ತು. ಆದರೆ, ಮಂಡ್ಯದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಪುಟ್ಟರಾಜು ಅವರು ಕುಮಾರಸ್ವಾಮಿ ಅಥವಾ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡಲಿ ಎಂದು ಹೇಳಿದ್ದರು.
ಇನ್ನೂ ಕಾರ್ಯಕರ್ತರಿಂದಲೂ ಸ್ಪರ್ಧೆಗೆ ಒತ್ತಡ ಬಂದಿದ್ದು, ಬಿಜೆಪಿ ವರಿಷ್ಠರಾದ ಅಮಿತ್ ಶಾ ಅವರು ಸಹ ಮಂಡ್ಯದಿಂದ ಕುಮಾರಸ್ವಾಮಿ ಅವರಿಗೆ ಸ್ಪರ್ಧೆ ಮಾಡುವಂತೆ ಒತ್ತಡ ಹಾಕಿದ್ದಾರೆ ಎನ್ನಲಾಗಿದೆ.
ಬಿಜೆಪಿ ಹೈಕಮಾಂಡ್‌ನಿಂದಲೂ ಮಂಡ್ಯದಿಂದ ಕುಮಾರಸ್ವಾಮಿ ಸ್ಪರ್ಧೆಯಿಂದ ಹಳೆ ಮೈಸೂರು ಭಾಗದಲ್ಲಿ ಎನ್‌ಡಿಎಗೆ ಬಲ ತಂದುಕೊಡಲಿದೆ ಎಂಬ ಮಾತು ಕೇಳಿ ಬಂದಿದೆ. ಹೀಗಾಗಿ ಹಲವು ಲೆಕ್ಕಾಚಾರಗಳ ಹಿನ್ನೆಲೆಯಲ್ಲಿ ಮಂಡ್ಯದ ಅಖಾಡಕ್ಕಿಳಿಯಲು ಕುಮಾರಸ್ವಾಮಿ ನಿರ್ಧರಿಸಿದ್ದಾರೆ.
ಅದಕ್ಕೂ ಮೊದಲು ಸೋಮವಾರ ಚನ್ನಪಟ್ಟಣದ ಮುಖಂಡರೊಂದಿಗೆ ಮಾತುಕತೆ ನಡೆಸಿ ಬಳಿಕ ಅಧಿಕೃತವಾಗಿ ಯಾರು ಸ್ಪರ್ಧಿಸಲಿದ್ದಾರೆ ಎಂಬುದರ ಬಗ್ಗೆ ಅಧಿಕೃತವಾಗಿ ಪ್ರಕಟಿಸಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.