ನ್ಯೂಡೆಲ್ಲಿ: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಜನತಾ ದಳ (ಜಾತ್ಯತೀತ) ನಾಯಕ ಎಚ್.ಡಿ. ಕುಮಾರಸ್ವಾಮಿ ಎನ್‌ಡಿಎ ಸರ್ಕಾರದಲ್ಲಿ ಕೇಂದ್ರ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಭಾನುವಾರ ರಾತ್ರಿ ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರುಕುಮಾರಸ್ವಾಮಿ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಸರತಿಯಲ್ಲಿ 9ನೇಯವರಾಗಿ ಕುಮಾರಸ್ವಾಮಿ ಅವರು ಪ್ರಮಾಣ ವಚನ ಸ್ವೀಕರಿಸಿದರು.
ಎಂಟು ಜನ ಬಿಜೆಪಿ ನಾಯಕರು ಪ್ರಮಾಣ ಸ್ವೀಕರಿಸಿದ ನಂತರ ಎನ್‌ಡಿಎ ಒಕ್ಕೂಟದ ಮಿತ್ರಪಕ್ಷಗಳಲ್ಲಿ ಮೊದಲಿಗರಾಗಿ ಕುಮಾರಸ್ವಾಮಿ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಲೋಕಸಭೆ ಚುನಾವಣೆಯಲ್ಲಿ ಗೆದ್ದ ಇಬ್ಬರು ಜೆಡಿಎಸ್ ಅಭ್ಯರ್ಥಿಗಳಲ್ಲಿ ಒಬ್ಬರಿಗೆ ಮೋದಿ ಸಂಪುಟದಲ್ಲಿ ಸಚಿವ ಸ್ಥಾನ ನೀಡಲಾಗಿದೆ. ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ.
ಕುಮಾರಸ್ವಾಮಿ ಅವರು 2006-07 ಮತ್ತು ನಂತರ 2018-19 ರವರೆಗೆ ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಅವರು ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಈ ಬಾರಿ, ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಲೋಕಸಭೆ ಚುನಾವಣೆ ಎದುರಿಸಿದ್ದು, ರಾಜ್ಯದ 28 ಕ್ಷೇತ್ರಗಳ ಪೈಕಿ 19 ರಲ್ಲಿ ಗೆಲುವು ಸಾಧಿಸಿವೆ.
ಕೃತಜ್ಞತೆ ಸಲ್ಲಿಸಿದ ಎಚ್‌ಡಿಕೆ : ಪ್ರಮಾಣ ವಚನ ಸಮಾರಂಭದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಎಚ್.ಡಿ. ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ ಮಾಡುವ ವಿಡಿಯೋವನ್ನು ಪೋಸ್ಟ್ ಮಾಡಿದ್ದು, ಮಂಡ್ಯ ಹಾಗೂ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಗೆಲುವು ನರೇಂದ್ರ ಮೋದಿ ಅವರ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಸಂಪುಟ ದರ್ಜೆ ಸಚಿವನಾಗಿ ಪ್ರಮಾಣ ವಚನ ಸ್ವೀಕರಿಸಿದೆ.
ಅಧಿಕಾರ ಗೌಪ್ಯತೆಯ ಪ್ರತಿಜ್ಞೆ ಭೋಧಿಸಿದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಗೌರವಪೂರ್ವಕ ಧನ್ಯವಾದಗಳು. ಅದೇರೀತಿ ದೇಶ ಸೇವೆ ಮಾಡಲು ನನಗೆ ಅವಕಾಶ ನೀಡಿದ ಮಂಡ್ಯ ಲೋಕಸಭಾ ಕ್ಷೇತ್ರದ ನಾಗರಿಕರಿಗೆ, ಕರ್ನಾಟಕದ ಜನತೆಗೆ ಹಾಗೂ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.