ಹುಬ್ಬಳ್ಳಿ: ವಿವಿಧ ಬೇಡಿಕೆಗಳ ಈಡೇರಿಗೆ ಆಗ್ರಹಿಸಿ ಮಾರ್ಚ್ 4ರಿಂದ ಫ್ರೀಡಂ ಪಾರ್ಕ್ನಲ್ಲಿ ಅಹೋರಾತ್ರಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ನೌಕರರ ಎಸ್ಸಿ ಎಸ್ಟಿ ಕ್ಷೇಮಾಭಿವೃದ್ಧಿ ಸಂಘದ ವಾಯುವ್ಯ ವಿಭಾಗದ ಅಧ್ಯಕ್ಷ ಡಿ.ಪ್ರಸಾದ್ ತಿಳಿಸಿದ್ದಾರೆ.
ನಗರದ ಪ್ರೆಸ್ಕ್ಲಬ್ನಲ್ಲಿ ಶನಿವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದಿನ ಸರ್ಕಾರವು ಚುನಾವಣಾ ಪೂರ್ವದಲ್ಲಿ ಘೋಷಿಸಿದ್ದ ಪ್ರಣಾಳಿಕೆಯಲ್ಲಿ ಒಂದಾದ ನಮ್ಮ ಸಂಘಟನೆಯ ಮುಖ್ಯ ಬೇಡಿಕೆಯಾದ ಸರ್ಕಾರಿ ನೌಕರರಿಗೆ ಸರಿ ಸಮಾನ ವೇತನ ಮತ್ತು ಸವಲತ್ತುಗಳನ್ನು ಸಾರಿಗೆ ನೌಕರರಿಗೂ ಸಹ ವಿಸ್ತರಿಸುವುದಾಗಿ ನೀಡಿದ್ದ ಭರವಸೆಯನ್ನು ಕಾಲ ವಿಳಂಬವಿಲ್ಲದೆ ಕೂಡಲೆ ಜಾರಿ ಮಾಡಬೇಕು ಎಂದು ಆಗ್ರಹಿಸಿದರು.
ಈ ಹಿಂದೆ ಡಿಸೆಂಬರ್ 2020 ಮತ್ತು ಏಪ್ರಿಲ್ 2021ರ ಮುಷ್ಕರಕ್ಕೆ ಸಂಬಂಧಿಸಿದಂತೆ ನೌಕರರ ವಿರುದ್ಧ ಕೈಗೊಂಡ ಎಲ್ಲ ಶಿಸ್ತಿನ ಕ್ರಮ, ವಜಾ ಮತ್ತು ಪೊಲೀಸ್ ಪ್ರಕರಣಗಳನ್ನು ರದ್ದುಮಾಡಿ ಮುಷ್ಕರದ ಪೂರ್ವದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸ್ಥಳಗಳಲ್ಲಿ ಕರ್ತವ್ಯಕ್ಕೆ ನಿಯೋಜಿಸಬೇಕು ಎಂದು ಒತ್ತಾಯಿಸಿದರು.
ಇನ್ನು 01-01-2020 ರಿಂದ ಅನ್ವಯವಾಗುವಂತೆ ನಾಲ್ಕು ಸಾರಿಗೆ ನಿಗಮಗಳ ಸಿಬ್ಬಂದಿಗಳಿಗೆ ಒಂದೇ ಕಂತಿನಲ್ಲಿ ಶೇ.15ರಷ್ಟು ಹೆಚ್ಚಳವಾಗಿರುವ ವೇತನದ ಹಿಂಬಾಕಿಯನ್ನು ಪಾವತಿಸಬೇಕು. ಮುಖ್ಯವಾಗಿ 2020 ರಿಂದ ನಿವೃತ್ತರಾಗಿರುವ ನೌಕರರಿಗೆ 01-01-2020 ರಿಂದ ವೇತನ ವಿಮರ್ಷೆ ಮಾಡಿ ಬಾಕಿ ಹಣವನ್ನು ಮತ್ತು ಹಿಂಬಾಕಿ ಮೊತ್ತವನ್ನು ಕೂಡಲೇ ಪಾವತ್ತಿಸಬೇಕು ಎಂದು ಆಗ್ರಹಿಸಿದರು.
ಸಂಸ್ಥೆಯು ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ಚುನಾವಣೆ ನಡೆಸಿ ಸಂಘಗಳ ಮಾನ್ಯತೆ ಪ್ರಶ್ನೆಯನ್ನು ಪ್ರಜಾಪ್ರಭುತ್ವದನ್ವಯ ನಿರ್ಧರಿಸಬೇಕಿತ್ತು. ಆದರೆ 1996 ರಿಂದ ಇದುವರೆಗೂ ಚುನಾವಣೆ ಮಾಡದೆ ಕಾರ್ಮಿಕರ ಬಹುಮತ ಕಳೆದುಕೊಂಡಿರುವ ಸಂಘಕ್ಕೆ ಮಾನ್ಯತೆ ಮುಂದುವರಿಸುತ್ತಿರುವುದು ಕಾನೂನು ಬಾಹಿರವಾಗಿದೆ ಎಂದು ಕಿಡಿಕಾರಿದರು.
ಸಾರಿಗೆ ನೌಕರರಿಗೆ ಮತ್ತು ಅವಲಂಬಿತರಿಗೆ ಉಚಿತ ಆರೋಗ್ಯ ಭಾಗ್ಯ ಯೋಜನೆ ಜಾರಿ ಮಾಡಬೇಕು. ಸಾರಿಗೆ ಸಂಸ್ಥೆಯಲ್ಲಿ ವಿದ್ಯುತ್ ಚಾಲಿತ ವಾಹನಗಳಿಗೆ ಖಾಸಗಿ ಚಾಲಕರನ್ನು ಮತ್ತು ನಿರ್ವಾಹಣೆಯನ್ನು ಹಾಗೂ ಸಂಸ್ಥೆಯ ವಾಹನಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಚಾಲನಾ, ತಾಂತ್ರಿಕ ಮತ್ತು ಭದ್ರತಾ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳುತ್ತಿರುವ ಪದ್ಧತಿಯನ್ನು ಈ ಕೂಡಲೇ ಕೈಬಿಡಬೇಕು ಎಂದರು.
ಈ ಎಲ್ಲ ಬೇಡಿಕೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ಮತ್ತು ಇವುಗಳನ್ನು ಈಡೇರಿಕೆಗಾಗಿ ಅನ್ಯ ಮಾರ್ಗವಿಲ್ಲದೆ ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆಯು ಮಾರ್ಚ್ 4 ರಿಂದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಅಹೋ ರಾತ್ರಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದೆ ಎಂದು ತಿಳಿಸಿದರು.