ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ”
ಮೈಸೂರು: ಮುಡಾ ಪ್ರಕರಣ ಸಂಬಂಧ ವಿಚಾರಣೆಗಾಗಿ ಮೈಸೂರಿನ ಲೋಕಾಯುಕ್ತಾ ಕಚೇರಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಸರಿ ಪಡೆ ರೊಚ್ಚಿಗೆದ್ದಿದ್ದು, ಸಿಎಂ ರಾಜೀನಾಮೆಗೆ ಆಗ್ರಹಿಸಿ “ಗೋ ಬ್ಯಾಕ್ ಸಿಎಂ ಚಳವಳಿ” ನಡೆಸಲಾಗಿದೆ.
ರಾಮಸ್ವಾಮಿ ವೃತ್ತದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾಗಿ, ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ಶ್ರೀವತ್ಸ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು.
ಅಲ್ಲದೆ ರಾಜೀನಾಮೆ ನೀಡಿ ನಂತರ ವಿಚಾರಣೆ ಎದುರಿಸಿ ಎಂದು ಒತ್ತಾಯಿಸಿದರು. ಇನ್ನು ಪ್ರತಿಭಟನೆ ತೀವ್ರ ಸ್ವರೂಪ ತಾಳುತ್ತಿದ್ದಂತೆಯೇ ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಬಿಗುವಿನ ವಾತವಾರಣ ನಿರ್ಮಾಣವಾಗಿತ್ತು. ಹೀಗಾಗಿ ಪ್ರತಿಭಟನೆಗೆ ಪೊಲೀಸರು ತಡೆಯೊಡ್ಡಿದರು.
ವಾಹನಗಳ ಸಮೇತ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದರು. ಈ ವೇಳೆ ಪೊಲೀಸರ ವಿರುದ್ದ ಬಿಜೆಪಿ ಕಾರ್ಯಕರ್ತರು ಅಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರು ಕಾಂಗ್ರೆಸ್ ಸರ್ಕಾರದ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ಕಿಡಿಕಾರಿದರು.