ಹುಬ್ಬಳ್ಳಿ: ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ಸ್ಥಾನದಿಂದ ವಿ.ಎಸ್ ಪಾಟೀಲ್ ಅವರನ್ನು ರದ್ದುಪಡಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್ ಅಧಿಸೂಚನೆ ಹೊರಡಿಸಿದ್ದಾರೆ.
ಬಿಜೆಪಿಯಲ್ಲಿ ಇದ್ದುಕ್ಕೊಂಡು ಈ ಹಿಂದೆ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಭೇಟಿಯಾಗಿದ್ದ ವಿ.ಎಸ್.ಪಾಟೀಲ್ ಪಕ್ಷ ಬಿಡುವ ಇಂಗಿತ ವ್ಯಕ್ತಪಡಿಸಿದ್ದರು. ಕ್ಷೇತ್ರದಲ್ಲಿ ಬಿಜೆಪಿ ಪಕ್ಷದಲ್ಲಿ ಹೊರಗಿನಿಂದ ಬಂದವರಿಂದ ನಿತ್ಯವೂ ಅಪಮಾನಿಸುವ ಕೆಲಸವಾಗುತ್ತಿದೆ ಎಂದು ಆರೋಪಿಸಿದ್ದರು.
ಆದರೆ, ಪಕ್ಷದಿಂದ ನನಗೆ ಅನ್ಯಾಯವಾಗಿಲ್ಲ ಎಂದು ಹೇಳಿಕೊಂಡಿದ್ದ ಅವರು, ಯಲ್ಲಾಪುರ ಕ್ಷೇತ್ರದ ಶಾಸಕ ಹಾಗೂ ಕಾರ್ಮಿಕ ಸಚಿವ ಹೆಬ್ಬಾರ್ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದರು.
ಅಧ್ಯಕ್ಷ ಸ್ಥಾನದಿಂದ ಕಿತ್ತುಹಾಕುತಿದ್ದಂತೆ ಪ್ರತಿಕ್ರಿಯೆ ನೀಡಿರುವ ಅವರು, ಶೀಘ್ರದಲ್ಲಿ ಕಾಂಗ್ರೆಸ್‍ಗೆ ಸೇರುವುದಾಗಿ ತಿಳಿಸಿದ್ದಾರೆ.
ಈ ಹಿಂದೆ 2008 ರಲ್ಲಿ ಬಿಜೆಪಿಯಿಂದ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಅವರು ನಂತರ ಕಾಂಗ್ರೆಸ್ ನಲ್ಲಿ ಹಿಂದೆ ಇದ್ದ ಶಿವರಾಮ್ ಹೆಬ್ಬಾರ್ ವಿರುದ್ಧ ಸೋಲು ಕಂಡಿದ್ದರು. ಬಳಿಕ ಕಳೆದ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್‍ನಿಂದ ಬಿಜೆಪಿಗೆ ಬಂದ ಶಿವರಾಮ್ ಹೆಬ್ಬಾರ್‌ಗೆ ಸ್ಥಾನ ಬಿಟ್ಟುಕೊಟ್ಟಿದ್ದರು.
ಇದೀಗ ವಿ.ಎಸ್.ಪಾಟೀಲ್ ಅವರು ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತಿರುವುದು ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಹೆಚ್ಚಿನ ಬಲ ಬಂದಂತಾಗಲಿದೆ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.