ಬೆಂಗಳೂರು ಗ್ರಾಮಾಂತರ: ಪ್ರಸಕ್ತ ಸಾಲಿಗೆ ವಿವಿಧ ಯೋಜನೆಗಳಡಿ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆಯ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸರ್ಕಾರದಿಂದ ಬಿಡುಗಡೆಯಾದ ಅನುದಾನ ಸಂಪೂರ್ಣ ಬಳಕೆಯಾಗಬೇಕು. ಯಾವುದೇ ಕಾರಣಕ್ಕೂ ಹಣ ಹಿಂದಿರುಗದಂತೆ ಕ್ರಮಕೈಗೊಳ್ಳಬೇಕು ಎಂದು ಜಿಲ್ಲೆಯ ಜಿಲ್ಲಾಧಿಕಾರಿ ಆರ್.ಲತಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ, ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ “ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆ ಕಾರ್ಯಕ್ರಮಗಳ 2022-23 ನೇ ಸಾಲಿನ ಜುಲೈ & ಆಗಸ್ಟ್-2022 ರ ಮಾಹೆಯ ಪ್ರಗತಿ ಪರಿಶೀಲನಾ ಸಭೆಯ” ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಗಿರಿಜನ ಉಪಯೋಜನೆಗೆ ಸಂಬಂಧಿಸಿದ ಬಾಕಿ ಇರುವಂತಹ ಅಭಿವೃದ್ಧಿ ಯೋಜನೆಗಳು ಮತ್ತು ಕಾಮಗಾರಿಗಳನ್ನು ಅಕ್ಟೋಬರ್ ಅಂತ್ಯಕ್ಕೆ ಪೂರ್ಣಗೊಳಿಸಬೇಕು ಎಂದರಲ್ಲದೇ ಪ್ರತಿಯೊಂದು ಇಲಾಖೆಯೂ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸರಿಯಾದ ಮಾಹಿತಿಯೊಂದಿಗೆ ಇಲಾಖೆಯ ಅಧಿಕಾರಿಗಳು ಹಾಜರಾಗಬೇಕು, ಇಲ್ಲವಾದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಕೈಗಾರಿಕೆ ಮತ್ತು ವಾಣಿಜ್ಯ, ಪಶುಪಾಲನೆ, ಕೃಷಿ, ರೇಷ್ಮೆ ಇಲಾಖೆ, ಮೀನುಗಾರಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಹಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ಇಲಾಖೆಗಳು ಎಸ್‌ಸಿಪಿ ಮತ್ತು ಟಿಎಸ್‌ಪಿ ಯೊಜನೆಯಡಿ ಶೇ. 100 ರಷ್ಟು ಪ್ರಗತಿ ಸಾಧಿಸುವಂತೆ ಹೇಳಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಕೃಷ್ಣಪ್ಪ ಸೇರಿದಂತೆ ಎಲ್ಲಾ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.