ಚಿಕ್ಕಮಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ಎರಡು ಬಸ್‌ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಎರಡೂ ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಇಬ್ಬರು ಚಾಲಕರು ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮದ ಬಳಿ ನಡೆದಿದೆ.
ಇಂದು ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಈ ಅಪಘಾತ ನಡೆದಿದೆ. ಮೂಡಿಗೆರೆಯಿಂದ ಬೇಲೂರಿಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೇಲೂರಿನಿಂದ ಮೂಡಿಗೆರೆಗೆ ಬರುತ್ತಿದ್ದ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಎರಡು ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದ 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಸ್ಥಳೀಯರು ಮತ್ತು ಆಂಬುಲೆನ್ಸ್ ಚಾಲಕರ ಸಹಾಯದಿಂದ ಗಾಯಾಳುಗಳನ್ನು ಮೂಡಿಗೆರೆ ಎಂಜಿಎಂ ಆಸ್ಪತ್ರೆಗೆ ಸಾಗಿಸಲಾಗಿದೆ. ಅದರಲ್ಲಿ ಕೆಲವರಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದು ಅವರನ್ನು ಬೇರೆಡೆಗೆ ಚಿಕಿತ್ಸೆಗೆ ಕರೆದೊಯ್ಯಲಾಗಿದೆ.
ಇನ್ನು ಎರಡೂ ಬಸ್‌ಗಳ ಮುಖಾಮುಖಿ ಡಿಕ್ಕಿಯಿಂದ ಬಸ್ ಚಾಲಕರ ಸೀಟ್‌ನ ಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಹೀಗಾಗಿ ಎರಡೂ ಬಸ್ಸಿನ ಚಾಲಕರಿಗೆ ಗಂಭೀರ ಗಾಯಗಳಾಗಿವೆ. ಮೂಡಿಗೆರೆ ತಾಲೂಕು ಬಹುತೇಕ ಮಲೆನಾಡು ಭಾಗದಿಂದ ಕೂಡಿದೆ. ಇಲ್ಲಿ ಹಾವು ಓಟದ ರಸ್ತೆಗಳೇ ಹೆಚ್ಚು.
ಹೀಗಾಗಿ ವಾಹನ ಚಾಲಕರು ಅತ್ಯಂತ ಜಾಗರೂಕರಾಗಿ ವಾಹನ ಚಲಾಯಿಸಬೇಕು. ಇಲ್ಲವಾದರೆ ಅಪಘಾತ ಕಟ್ಟಿಟ್ಟ ಬುತ್ತಿ. ಮೂಡಿಗೆರೆ ತಾಲೂಕಿನ ಅಲ್ಲಲ್ಲಿ ಹಲವು ಅಪಘಾತಗಳು ಸಂಭವಿಸುತ್ತಿವೆ. ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.