ಬೆಂಗಳೂರು: 2018ರ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಪತನದಲ್ಲಿ ಸಿದ್ದರಾಮಯ್ಯ ಪಾತ್ರ ನಿರಾಕರಿಸಲು ಸಾಧ್ಯವೇ ಎಂದು ಬಿಜೆಪಿಯ ಮಾಜಿ ಸಚಿವ ಡಾ.ಕೆ.ಸುಧಾಕರ್ ಪ್ರಶ್ನಿಸಿದ್ದಾರೆ.
2018ರಲ್ಲಿ ಅಂದಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಮಗಾಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಶಾಸಕರುಗಳು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಸಿದ್ದರಾಮಯ್ಯನವರ ಬಳಿ ಹೋದಾಗಲೆಲ್ಲ ಈ ಸರ್ಕಾರದಲ್ಲಿ ನನ್ನದೇ ಏನು ನಡೆಯುತ್ತಿಲ್ಲ, ನನ್ನ ಕ್ಷೇತ್ರದ, ನನ್ನ ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು ಎಂದು ಸರಣಿ ಟ್ವೀಟ್ ಮಾಡುವ ಮೂಲಕ ಮೈತ್ರಿ ಸರ್ಕಾರ ಪತನದ ಹಿಂದೆ ಸಿದ್ದರಾಮಯ್ಯ ಪ್ರಮುಖ ಪಾತ್ರ ವಹಿಸಿದ್ದರು ಎಂಬುದನ್ನು ಬಹಿರಂಗಪಡಿಸಿದ್ದಾರೆ.
ಇನ್ನು 2019ರ ಲೋಕಸಭೆ ಚುನಾವಣೆವರೆಗೂ ಸಹಿಸಿಕೊಳ್ಳಿ, ಲೋಕಸಭೆ ಚುನಾವಣೆ ಮುಗಿದ ನಂತರ ಯಾವುದೇ ಕಾರಣಕ್ಕೂ ಒಂದು ದಿವಸವೂ ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಈ ಸಮ್ಮಿಶ್ರ ಸರ್ಕಾರ ಇರಲು ಬಿಡುವುದಿಲ್ಲ ಎಂದು ಶಾಸಕರಿಗೆ ಸಮಾಧಾನ ಮಾಡುತ್ತಿದ್ದರು.
ನಮ್ಮ ಕ್ಷೇತ್ರಗಳಲ್ಲಿ ನಮ್ಮನ್ನು ನಂಬಿದ ಕಾರ್ಯಕರ್ತರನ್ನು, ಮುಖಂಡರನ್ನು ಉಳಿಸಿಕೊಳ್ಳಲು ದೊಡ್ಡ ರಿಸ್ಕ್ ತೆಗೆದುಕೊಂಡು ರಾಜೀನಾಮೆ ಕೊಟ್ಟು ಮತ್ತೊಮ್ಮೆ ಜನರಿಂದ ಆರಿಸಿ ಬಂದು ಮಂತ್ರಿಗಳಾದೆವು ಎಂದು ಸಿದ್ದರಾಮಯ್ಯ ಅವರ ಕುಟಿಲ ಬುದ್ದಿಯ ಬಗ್ಗೆ ವಿವರಿಸಿದ್ದಾರೆ.
ನಮ್ಮ ನಡೆಯಲ್ಲಿ ಸಿದ್ದರಾಮಯ್ಯನವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇಲ್ಲವೆಂದು ಸಿದ್ದರಾಮಯ್ಯನವರು ನಿರಾಕರಿಸಲು ಸಾಧ್ಯವೇ ಎಂದು ಪ್ರಶ್ನಿಸಿರುವ ಅವರು 17 ಶಾಸಕರು ಮೈತ್ರಿ ಸರ್ಕಾರ ಬೀಳಿಸಿ ಬಿಜೆಪಿಯತ್ತ ಮುಖ ಮಾಡಲು ಪ್ರಮುಖ ಪಾತ್ರವಹಿಸಿದವರೇ ಇವರು ಎಂದು ಹೇಳಿದ್ದಾರೆ.
2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಪಡೆದಿತ್ತು, ಇದನ್ನೇ ನಮ್ಮ ಪಕ್ಷ ಅತ್ಯದಿಕ ಸ್ಥಾನಗಳನ್ನು ಪಡೆದಿದೆ ಎಂದು ತರಾತುರಿಯಲ್ಲಿ ಬಿಜೆಪಿಯ ಯಡಿಯೂರಪ್ಪ ಸಿಎಂ ಆಗಿ ಪ್ರಮಾಣ ವಚನವನ್ನೂ ಸ್ವೀಕರಿಸಿದರು. ಆದರೆ, ಬಹುಮತ ಸಾಬೀತು ಮಾಡುವಲ್ಲಿ ವಿಫಲರಾಗಿ ಪ್ರಮಾಣ ವಚನ ಸ್ವೀಕರಿಸಿದ ಕೇವಲ ಮೂರೇ ದಿನದಲ್ಲಿ ಅಧಿಕಾರ ಕಳೆದುಕೊಂಡರು.
ಇನ್ನು ಅಂದು ಕಾಂಗ್ರೆಸ್ 78 ಮತ್ತು ಜೆಡಿಎಸ್ 38 ಸ್ಥಾನಗಳನ್ನು ಪಡೆದಿದ್ದರಿಂದ ಮೈತ್ರಿ ಸರ್ಕಾರ ರಚನೆಯಾಗಿತು. ಆ ಬಳಿಕ ಆಪರೇಷನ್ ಕಮಲ ಮಾಡಿ 17 ಶಾಸಕರನ್ನು ತಮ್ಮತ್ತ ಸೆಳೆದುಕೊಂಡ ಬಿಜೆಪಿ ಅವರಿಂದ ರಾಜೀನಾಮೆ ಕೊಡಿಸಿ ಬಳಿಕ ಗೆಲ್ಲಿಸಿಕೊಂಡಿತ್ತು. ಆ ವೇಳೆ ಬಿಜೆಪಿ ಅಧಿಕಾರಕ್ಕೆ ಬರಲು ಈ ಸಿದ್ದರಾಮಯ್ಯ ಅವರ ಕುತಂತ್ರವೇ ಕಾರಣ ಎಂದು ಡಾ.ಸುಧಾಕರ್ ಈಗ ಟ್ವೀಟ್ ಮಾಡುವ ಮೂಲಕ ಬಹಿರಂಗಪಡಿಸಿದ್ದಾರೆ.
2018ರಲ್ಲಿ ಅಂದಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಮಗಾಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಶಾಸಕರುಗಳು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಮಾನ್ಯ ಸಿದ್ದರಾಮಯ್ಯನವರ ಬಳಿ ಹೋದಾಗಲೆಲ್ಲ ಈ ಸರ್ಕಾರದಲ್ಲಿ ನನ್ನದೇ ಏನು ನಡೆಯುತ್ತಿಲ್ಲ, ನನ್ನ ಕ್ಷೇತ್ರದ, ನನ್ನ ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು.
1/3
— Dr Sudhakar K (@DrSudhakar_) May 17, 2023