NEWSನಮ್ಮರಾಜ್ಯ

88 ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು ಬೇಲಿಯೇ ಎದ್ದು ಹೊಲ ಮೇಯ್ದಂತೆ ಇದು ಅಕ್ಷಮ್ಯ ಅಪರಾಧ: ಸಿಎಂ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪೊಲೀಸ್‌ ಇಲಾಖೆ ಕೆಲವು ಠಾಣೆಗಳಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಇನ್ನು ಕೆಲವೆಡೆ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಸುಮಾರು 88 ಪ್ರಕರಣಗಳಲ್ಲಿ ಪೊಲೀಸ್‌ನವರೇ ಶಾಮೀಲಾಗಿದ್ದಾರೆ. ಬೇಲಿಯೇ ಎದ್ದು ಹೊಲ ಮೇಯ್ದಂತೆ ಆಗಿರುವುದು ಅಕ್ಷಮ್ಯ ಅಪರಾಧ ಎಂದು ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅವರು ಇಂದು ನಗರದ ಪೊಲೀಸ್‌ ಮಹಾನಿರ್ದೇಶಕರ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಹಿರಿಯ ಪೊಲೀಸ್‌ ಅಧಿಕಾರಿಗಳ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿ, ಇದು ರಾಜ್ಯ ಸರ್ಕಾರ ಮಾತ್ರವಲ್ಲದೆ, ಪೊಲೀಸ್‌ ಇಲಾಖೆಗೂ ಕೆಟ್ಟ ಹೆಸರು ತರುವಂಥ ಕೆಲಸ ಎಂದರು.

ಇನ್ನು 2003ರಿಂದ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಾಗುತ್ತಿದೆ. ರಾಯಚೂರು ಜಿಲ್ಲೆಯ ಕವಿತಾಳ ಪೊಲೀಸ್ ಠಾಣೆ ದೇಶದಲ್ಲಿಯೇ ಉತ್ತಮ ಪೊಲೀಸ್‌ ಠಾಣೆಗಳ ಸಾಲಿನಲ್ಲಿ ಮೂರನೇ ಸ್ಥಾನ ಪಡೆದಿದೆ ಎಂದು ತಿಳಿಸಿದರು.

ಪೊಲೀಸ್‌ ಸಬ್‌ ಇನ್ಸ್ಪೆಕ್ಟರ್, ಎ.ಎಸ್.ಪಿ, ಡಿ.ವೈ.ಎಸ್.ಪಿ, ಎಸಿಪಿ ಇವರಿಗೆ ಗೊತ್ತಿಲ್ಲದೆ ಯಾವ ಅಪರಾಧವೂ ನಡೆಯಲು ಸಾಧ್ಯವಿಲ್ಲ. ಪೊಲೀಸರು ಜಾಗರೂಕತೆಯಿಂದ ಕೆಲಸ ಮಾಡಬೇಕೆಂದು ಸ್ಪಷ್ಟವಾಗಿ ಸೂಚಿಸಿದ್ದೇನೆ. ವಿಶೇಷವಾಗಿ ದುರ್ಬಲರಿಗೆ ರಕ್ಷಣೆ ನೀಡಬೇಕು. ಬಲಾಢ್ಯರ ಕೈಗೊಂಬೆಗಳಂತೆ ಕೆಲಸ ಮಾಡಬಾರದು ಎಂದು ಹೇಳಿದ್ದೇನೆ ಎಂದರು.

ಪೊಲೀಸರು ಜಾಗರೂಕತೆಯಿಂದ, ದಕ್ಷತೆಯಿಂದ ಕೆಲಸ ಮಾಡಿದರೆ ರಾಜ್ಯವನ್ನು ಮಾದಕ ವಸ್ತು ಮುಕ್ತವನ್ನಾಗಿಸಬಹುದು. ಕಳ್ಳತನ, ಸುಲಿಗೆ, ದರೋಡೆ, ಕೊಲೆ ಮುಂತಾದ ಪ್ರಕರಣಗಳು ಕಡಿಮೆಯಾಗುತ್ತಿದ್ದರೂ, ಸೈಬರ್ ಅಪರಾಧ ಹಾಗೂ ಡ್ರಗ್ಸ್ ಅಪರಾಧಗಳು ಕಡಿಮೆಯಾಗುತ್ತಿಲ್ಲ. ಯುವಜನರು ಇದರಿಂದ ಹಾಳಾಗುತ್ತಿದ್ದು, ಕರ್ನಾಟಕವನ್ನು ಮಾದಕ ವಸ್ತು ಮುಕ್ತ ರಾಜ್ಯವಾಗಿಸಬೇಕೆಂದು ಸರ್ಕಾರ ಘೋಷಣೆ ಮಾಡಿದೆ. ಪೊಲೀಸರು ಜಾಗರೂಕತೆಯಿಂದ, ದಕ್ಷತೆಯಿಂದ ಕೆಲಸ ಮಾಡಿದರೆ ರಾಜ್ಯವನ್ನು ಮಾದಕ ವಸ್ತು ಮುಕ್ತವನ್ನಾಗಿಸಬಹುದು. ಜತೆಗೆ ಯುವಜನರನ್ನೂ ರಕ್ಷಿಸಬಹುದು ಎಂದು ಹೇಳಿದರು.

ಡ್ರಗ್ಸ್ ದಂಧೆ ಮಾಡುವ ವಿದೇಶಿಯರನ್ನು ಮುಲಾಜಿಲ್ಲದೆ ಅವರ ದೇಶಕ್ಕೆ ಕಳುಹಿಸಬೇಕು. ಡ್ರಗ್ಸ್ ಮಾರಾಟ ಮಾಡುವವರನ್ನು ವಿಚಾರಣೆ ಮಾಡಿದರೆ ಅಥವಾ ಮಾದಕ ವಸ್ತು ವ್ಯಸನಿಗಳನ್ನು ವಿಚಾರಿಸಿದರೆ ಡ್ರಗ್ಸ್ ಜಾಲವನ್ನು ಪತ್ತೆ ಹಚ್ಚಬಹುದು. ಸರಬರಾಜು ಮಾಡುವವರನ್ನು ವಿಚಾರಣೆಗೆ ಗುರಿಪಡಿಸಿದರೆ ಉತ್ಪಾದಕರು ಹಾಗೂ ಸರಬರಾಜುದಾರರು ಯಾರು ಎಂದು ತಿಳಿಯುತ್ತದೆ. ಎಲ್ಲ ಪೊಲೀಸ್ ಠಾಣೆಗಳಲ್ಲಿ ಈ ಕೆಲಸವನ್ನು ತಕ್ಷಣದಿಂದಲೇ ಮಾಡಬೇಕೆಂದು ಸೂಚಿಸಿದ್ದೇನೆ ಎಂದರು.

ವಿದೇಶಿಯರು ಜಾಮೀನಿನ ಮೇಲೆ ಬಿಡುಗಡೆಯಾಗಿ ಇಲ್ಲೇ ಉಳಿದರೆ ಪುನಃ ಅದೇ ಅಪರಾಧದಲ್ಲಿ ತೊಡಗುವ ಸಾಧ್ಯತೆಗಳು ಹೆಚ್ಚು. ಆದ್ದರಿಂದ ವಿದೇಶಿಯರನ್ನು ಯಾವುದೇ ಮುಲಾಜಿಲ್ಲದೆ ಅವರ ದೇಶಕ್ಕೆ ಕಳುಹಿಸಬೇಕು ಎಂದು ಸೂಚಿಸಿದ್ದೇನೆ.

ಠಾಣೆಗಳಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಪೊಲೀಸ್ ಸಬ್ ಇನ್ಸ್ಪೆಕ್ಟರ್, ಡಿ.ವೈ.ಎಸ್.ಪಿಗಳ ಮೇಲೆ ಮೇಲಧಿಕಾರಿಗಳು ನಿಗಾ ಇಡಲು ಸೂಚಿಸಲಾಗಿದೆ. ಅಪರಾಧಗಳಲ್ಲಿ ಅವರು ಶಾಮೀಲಾಗಬಾರದು. ಮಹಾರಾಷ್ಟ್ರದ ಪೊಲೀಸರಿಗೆ ಬೆಂಗಳೂರಿಗೆ ಬಂದು ಡ್ರಗ್ಸ್ ಪತ್ತೆಹಚ್ಚಲು ಸಾಧ್ಯವಾದರೆ, ರಾಜ್ಯದ ಪೊಲೀಸರಿಗೆ ಯಾಕೆ ಸಾಧ್ಯವಾಗದು? ರಾಜ್ಯದ ಪೊಲೀಸರು ಇದನ್ನು ಪತ್ತೆ ಹಚ್ಚುವಲ್ಲಿ ವಿಫಲರಾಗಿದ್ದು, ಸಂಬಂಧಪಟ್ಟ ಪೊಲೀಸರ ಮೇಲೆ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ ಎಂದು ತಿಳಿಸಿದರು.

ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಪೊಲೀಸ್ ಮಹಾ ನಿರ್ದೇಶಕ ಡಾ.ಎಂ.ಎ.ಸಲೀಂ, ಒಳಾಡಳಿತ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಮುಖ್ಯಮಂತ್ರಿ ಅವರ ಕಾರ್ಯದರ್ಶಿ ಬಿ.ಬಿ.ಕಾವೇರಿ ಉಪಸ್ಥಿತರಿದ್ದರು.

Megha
the authorMegha

Leave a Reply

error: Content is protected !!