ಬೆಂಗಳೂರು: ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ಸಂಸ್ಥೆಗಳ ನೌಕರರಿಗೆ ವೇತನ ಪರಿಷ್ಕರಣೆಯ ಹಿಂಬಾಕಿ ಪಾವತಿ ಹಾಗೂ ನಿವೃತ್ತ ನೌಕರರಿಗೆ ಪರಿಷ್ಕೃತ ವೇತನ ಶ್ರೇಣಿಯಲ್ಲಿ ವೇತನ ನಿಗದಿ ಕುರಿತು ಚರ್ಚಿಸಲು ಕರೆಯಲಾಗಿದ್ದ ನಾಲ್ಕೂ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರ ಸಭೆಯನ್ನು ಮುಂದೂಡಲಾಗಿದೆ ಎಂದು ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ವಿ.ಎಸ್.ಪುಷ್ಟ ತಿಳಿಸಿದ್ದಾರೆ.
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ಇದೇ ಜೂನ್ 15ರ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಶಾಂತಿ ನಗರದಲ್ಲಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ ಸಭೆ ಆಯೋಜಿಸಲಾಗಿತ್ತು. ಆದರೆ, ಕಾರಣಾಂತರಗಳಿಂದ ಈ ಸಭೆಯನ್ನು ಮುಂದೂಡಲಾಗಿದೆ ಎಂದು ವಿ.ಎಸ್.ಪುಷ್ಟ ತಿಳಿಸಿದ್ದಾರೆ.
ಇದೇ ಜೂನ್ 11ರಂದು ಸಭೆ ಕರೆಯಾಲಾಗಿತ್ತು. ಈ ಸಭೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಹುಬ್ಬಳ್ಳಿಯಲ್ಲಿರುವ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕಲಬುರಗಿಯಲ್ಲಿರುವ ವ್ಯವಸ್ಥಾಪಕ ನಿರ್ದೇಶಕರಿಗೆ ಸಭಾ ಸೂಚನಾ ಪತ್ರವನ್ನು ರವಾನಿಸಲಾಗಿತ್ತು.
ಆಯೋಜನೆಗೊಂಡಿದ್ದ ಸಭೆಯಲ್ಲಿ 2020 ಜನವರಿ 1ರ ನಂತನ 2023 ಮಾರ್ಚ್ ನಡುವೆ ನಿವೃತ್ತರಾದ ನೌಕರರಿಗೆ ಈ ವೇತನ ಹಿಂಬಾಕಿ ಸಂಬಂಧ ಬಹುತೇಕ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ ಈಗ ಕಾರಣಾಂತರಗಳಿಂದ ಸಭೆಯನ್ನು ಮುಂದೂಡಿರುವುದಾಗಿ ತಿಳಿಸಿದ್ದಾರೆ.
ಇನ್ನು ಮತ್ತೆ ಈ ಸಭೆಯ ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ವಿ.ಎಸ್.ಪುಷ್ಟ ತಿಳಿಸಿದ್ದಾರೆ.