
ರಾಮನಗರ: ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಕ್ಯಾಂಟರ್‌ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಬಸ್ ಡಿಕ್ಕಿ ಹೊಡೆದ ಪರಿಣಾಮ ಚಾಲಕನ ಕಾಲುಗಳು ಮುರಿದಿದ್ದು, 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಸೋಲೂರು ಬಳಿ ನಡೆದಿದೆ.
ಚಿಕ್ಕಮಂಗಳೂರು ವಿಭಾಗದ ಸಕಲೇಶಪುರ ಘಟಕದ ಬಸ್ ಅಪಘಾತಕೀಡಾಗಿದ್ದು, ಬಸ್ ಚಾಲಕನ ಸ್ಥಿತಿ ಗಂಭೀರವಾಗಿದೆ. ಬಸ್ಸಿನಲ್ಲಿದ್ದ 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅಪಘಾತದ ತೀವ್ರತೆಗೆ ಬಸ್‌ನ ಮುಂದಿನ ಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳೀಯರು ಜೆಸಿಬಿ ಬಳಸಿ ಚಾಲಕನನ್ನು ರಕ್ಷಿಸಿದ್ದಾರೆ.
ಬಸ್ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿತ್ತು ಈ ವೇಳೆ ಕ್ಯಾಂಟರ್ ಪಂಕ್ಚರ್ ಆಗಿದ್ದು, ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಲಾಗಿತ್ತು. ಚಾಲಕ ಅದನ್ನೆಲ್ಲ ಗಮನಿಸದೆ ಬಸ್ ಚಲಾಯಿಸಿದ್ದ ಪರಿಣಾಮ ಬಸ್ ಕ್ಯಾಂಟರ್ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ.
ಇನ್ನು ಅಪಘಾತದಿಂದ ಗಾಯಗೊಂಡ ಪ್ರಯಾಣಿಕರು ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವಘಡ ಸಂಬಂಧ ಸೋಲೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.