
ಬೆಂಗಳೂರು: 2020 ಜನವರಿ 1ರಿಂದ ವೇತನ ಹೆಚ್ಚಳವಾಗಬೇಕು ಎಂದು ಆಗ್ರಹಿಸಿ ಸುಮಾರು 15 ದಿನಗಳ ಕಾಲ ಮುಷ್ಕರ ಮಾಡಿದ ಸಾರಿಗೆಯ ನೂರಾರು ನೌಕರರು ಹಾಗೂ ಅವರ ಕುಟುಂಬದವರ ವಿರುದ್ಧ ದಾಖಲಾಗಿರುವ ಪೊಲೀಸ್ ಪ್ರಕರಣಗಳು ಹಾಗೂ ವಜಾಗೊಂಡ ನೌಕರರ ವಿಷಯಕ್ಕೆ ಸಂಬಂಧಿಸಿದಂತೆ ಇದೇ ಏ.28ರಂದು ಸಾರಿಗೆ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ಆಯೋಜಿಸಲಾಗಿದೆ.
ಇದೇ ಏ.15ರಂದು ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಸಾರಿಗೆ ನೌಕರರ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ದರು. ಆ ಸಭೆಯಲ್ಲಿ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಬಗ್ಗೆ ಚರ್ಚೆ ನಡೆಸಲಾಗಿತ್ತು.
ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2021ರ ಏಪ್ರಿಲ್‌ನಲ್ಲಿ ನಡೆದ ಮುಷ್ಕರದ ವೇಳೆ ನೌಕರರು ಹಾಗೂ ಅವರ ಕುಟುಂಬದವರ ವಿರುದ್ಧ ದಾಖಲಾಗಿರುವ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಎಲ್ಲ ಸಂಘನೆಗಳೂ ಒತ್ತಾಯಿಸಿದವು. ಆ ವೇಳೆ ಅತೀಶೀಘ್ರದಲ್ಲೇ ಈ ಬಗ್ಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಭರವಸೆ ನೀಡಿದ್ದರು.
ಅದರಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ಸಾರಿಗೆ ಸಂಸ್ಥೆಯಲ್ಲಿ ವಜಾಗೊಂಡ ನೌಕರರ ವಿಷಯಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಏ.28ರ ಸೋಮವಾರ ಮಧ್ಯಾಹ್ನ:12 ಗಂಟೆಗೆ ಶಾಂತಿನಗರದಲ್ಲಿರುವ ಕೆಎಸ್ಆರ್ಟಿಸಿ ಕೇಂದ್ರ ಕಚೇರಿಯ ಸಭಾಂಗಣದಲ್ಲಿ ಸಭೆ ಆಯೋಜಿಸಲಾಗಿದೆ.
ಈ ಸಭೆಗೆ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಹಾಜರಾಗುವಂತೆ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಸಚಿವರ ಸೂಚನೆ ಮೇರೆಗೆ ಮಾಹಿತಿ ನೀಡಿದ್ದಾರೆ.
ಈ ಸಂಬಂಧ ಸಾರಿಗೆ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಒಕ್ಕೂಟದ ಅಧ್ಯಕ್ಷರಿಗೆ ಮಾಹಿತಿ ನೀಡಿದ್ದು ಸಭೆಗೆ ನಾಳೆ ಹಾಜರಾಗುವಂತೆ ಸೂಚಿಸಿದ್ದಾರೆ.
