ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಸೇರಿದಂತೆ ಬರೋಬರಿ 11 ಐಎಎಸ್ ಅಧಿಕಾರಿಗಳುನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ಅವರಲ್ಲಿ ಅನ್ಬುಕುಮಾರ್ ಅವರ ವರ್ಗಾವಣೆಯನ್ನು ರದ್ದು ಮಾಡಿ ಆದೇಶ ಹೊರಡಿಸಿದೆ.
2004ರ ಬ್ಯಾಚ್ನ ಐಎಎಸ್ ಅಧಿಕಾರಿ ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ವಿ. ಅನ್ಬುಕುಮಾರ್ ಅವರನ್ನು ಮಂಗಳವಾರ ಕೃಷಿ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಿದ್ದ ಸರ್ಕಾರ ಕೆಲವೇ ಗಂಟೆಗಳಲ್ಲಿ ತನ್ನ ವರ್ಗಾವಣೆಯನ್ನು ವಾಪಸ್ ಪಡೆದು ಕೆಎಸ್ಆರ್ಟಿಸಿ ಎಂಡಿಯಾಗಿಯೇ ಮುಂದುವರಿಯಲು ಮರು ಆದೇಶ ಹೊರಡಿಸಿದೆ.
ಇವರ ಜತೆಗೆ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಕಾರ್ಯದರ್ಶಿಯಾಗಿದ್ದ 2007ರ ಬ್ಯಾಚ್ನ ಐಎಎಸ್ ಅಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜಾ ಅವರನ್ನು ವಾಣಿಜ್ಯ ಹಾಗೂ ಕೈಗಾರಿಕೆ ಇಲಾಖೆ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿತ್ತು.
ಆದರೆ, ಮತ್ತೆ ಅವರನ್ನು ಕರ್ನಾಟಕ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಪ್ರಾಧಿಕಾರದ ಮುಖ್ಯ ಮೌಲ್ಯಮಾಪನ ಅಧಿಕಾರಿಯಾಗಿ ವರ್ಗಾವಣೆ ಮಾಡಿದ್ದು, ವಾಣಿಜ್ಯ ಹಾಗೂ ಕೈಗಾರಿಕೆ ಇಲಾಖೆ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳುವ ಮುನ್ನವೇ ಮತ್ತೊಂದು ಅದೇಶ ಹೊರಡಿಸಿದೆ.
ಇನ್ನು ತುಮಕೂರು ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣ ಅಧಿಕಾರಿಯಾಗಿದ್ದ 20014ರ ಬ್ಯಾಚ್ನ ಐಎಎಸ್ ಅಧಿಕಾರಿ ವಿದ್ಯಾಕುಮಾರಿ ಅವರನ್ನು ತುಮಕೂರಿನ ನೂತನ ಜಿಲ್ಲಾಧಿಕಾರಿಯಾಗಿ ನಿಯೋಜಿಸಿ ವರ್ಗಾವಣೆ ಮಾಡಲಾಗಿದೆ.
ಕಾಂಗ್ರೆಸ್ನ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನಿನ್ನೆ ಮಂಗಳವಾರ 11 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು, ಬಳಿಕ ವಿದ್ಯಾಕುಮಾರಿ ಸೇರಿದಂತೆ ಮತ್ತೆ ಮೂವರು ಐಎಎಸ್ ಅಧಿಕಾರಿಗಳನ್ನು ಬೇರೆ ಬೇರೆ ಹುದ್ದೆಗೆ ನಿಯೋಜನೆ ಮಾಡಿ ಆದೇಶ ಹೊರಡಿಸಿದ್ದು, ಈ ಮೂಲಕ 12 ಅಧಿಕಾರಿಗಳನ್ನು ಮಂಗಳವಾರ ವರ್ಗಾವಣೆ ಮಾಡಿದೆ.