KSRTC: ಆಗಸ್ಟ್ 5ರಿಂದ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಪಕ್ಕ!

ಕೆಎಸ್‌ಆರ್‌ಟಿಸಿ ನೌಕರರಿಗೆ ಉಚಿತ ಆರೋಗ್ಯ ಯೋಜನೆ ಕುರಿತ ಸಂಪೂರ್ಣ ಮಾಹಿತಿ: https://ksrtcarogya.in/ 
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ಶೇ.15ರಷ್ಟು ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಪಾವತಿ ಹಾಗೂ 2024ರ ಜನವರಿ 1ರಿಂದ ಆಗಬೇಕಿರುವ ವೇತನ ಹೆಚ್ಚಳವೂ ಸೇರಿದಂತೆ ಇತರೆ ಬೇಡಿಕೆಗಳ ಈಡೇರಿಕೆಗೆ ಈವರೆಗೂ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ಸಾರಿಗೆ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಆ.5ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ.
ಈ ಸಂಬಂಧ ಇಂದು ಸುದ್ದಿಗೋಷ್ಠಿ ನಡೆಸಿದ ಸಮಿತಿಯ ಪದಾಧಿಕಾರಿಗಳು, ನಮ್ಮ ಜತೆ ಜು.4ರಂದು ಸಭೆ ನಡೆಸಿದ್ದ ಸಿಎಂ ಸಿದ್ದರಾಮಯ್ಯ ಅವರು ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಪಾವತಿ ಸಂಬಂಧ ಚರ್ಚಿಸಲು ಮತ್ತೆ ಒಂದು ವಾರದೊಳಗೆ ಸಭೆ ಕರೆಯುವುದಾಗಿ ಭರವಸೆ ನೀಡಿ ಅಂದಿನ ಸಭೆಯನ್ನು ಮುಂದೂಡಿದ್ದರು. ಆದರೀಗ 12 ದಿನ ಕಳೆದರೂ ಸಭೆ ಕರೆದಿಲ್ಲ. ಹೀಗಾಗಿ, ಮುಷ್ಕರ ನಡೆಸುವುದು ಪಕ್ಕ ಎಂದು ಹೇಳಿದ್ದಾರೆ.
ಇನ್ನು 2020ರ ಜ.1ರಿಂದ ಅನ್ವಯವಾಗುವಂತೆ ಶೇ.15ರಷ್ಟು ವೇತನ ಹೆಚ್ಚಳವಾಗಿದ್ದು ಅದರ 38 ತಿಂಗಳ ಹಿಂಬಾಕಿ ಪಾವತಿ, 2024ರ ಜ.1ರಿಂದ ಜಾರಿಗೆ ಬರುವಂತೆ ವೇತನ ಹೆಚ್ಚಳ ಸಂಬಂಧ ಸಿಎಂ ಅಧ್ಯಕ್ಷತೆಯಲ್ಲಿ ಎರಡು ಬಾರಿ ಸಭೆ ನಡೆದಿದೆ. ಆದರೂ ಈವರೆಗೂ ಬೇಡಿಕೆಗಳ ಈಡೇರಿಕೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಜತೆಗೆ ಹಳೇ ಕತೆಯನ್ನೇ ಹೇಳಿಕೊಂಡು ಬರಬೇಡಿ ನೌಕರರಿಗೆ ಸಿಗಬೇಕಿರುವ ಸೌಲಭ್ಯ ನೀಡಿ ಎಂದು ಆಗ್ರಹಿಸಿದರು.
ಇದಕ್ಕೆ ತಾವು ಸ್ಪಂದಿಸದಿದ್ದರೆ ಆ.5ರಿಂದ ಅನಿರ್ದಿಷ್ಟಾವಧಿ ಮುಷ್ಕರ ಮಾಡುವುದನ್ನು ನಿಲ್ಲಿಸಲಾಗದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ ಜಂಟಿ ಕ್ರಿಯಾ ಸಮಿತಿ.
Related
