
ಮಂಡ್ಯ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಮದ ಬಸ್ ಹಾಗೂ ಕಾರು ನಡುವೆ ಸಂಭವಿಸಿ ಭೀಕರ ಅಪಘಾತಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೈವೆಯ ತೂಬಿನಕೆರೆ ಗ್ರಾಮದ ಬಳಿ ಎಕ್ಸಿಟ್ನಲ್ಲಿ ನಡೆದಿದೆ.
ಬೆಂಗಳೂರಿನ ಜೆ.ಪಿ.ನಗರದ ನಿವಾಸಿಗಳಾದ 52 ವರ್ಷದ ಸತ್ಯಾನಂದ ರಾಜೇ ಅರಸ್, ಪತ್ನಿ ನಿಶ್ಚಿತಾ , ಚಂದ್ರು ಮತ್ತು ಸುವೇದಿನಿ ರಾಣಿ ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಮಂಡ್ಯ ತಾಲೂಕಿನ ತೂಬಿನಕೆರೆ ಗ್ರಾಮದ ಬಳಿ ಕೆಎಸ್‌ಆರ್‌ಟಿಸಿ ಐರಾವತ ಬಸ್ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಸ್ಥಳದಲ್ಲೇ ಅಸುನೀಗಿದ್ದಾರೆ. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ.
ಎಕ್ಸ್ಪ್ರೆಸ್ ಹೈವೇಯಿಂದ ಎಕ್ಸಿಟ್ ಆಗುವಾಗ ಕಾರು ಚಾಲಕನಿಗೆ ಗೊಂದಲವಾಗಿದೆ. ಹೀಗಾಗಿ ಮತ್ತೆ ಎಕ್ಸ್ಪ್ರೆಸ್ ಹೈವೇಗೆ ಚಾಲಕ ಕಾರು ತಿರುಗಿಸಿದ್ದಾನೆ. ಈ ವೇಳೆ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಐರಾವತ ಬಸ್ ಡಿಕ್ಕಿ ಹೊಡೆದಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದಕ್ಷಿಣ ವಲಯ ಐಜಿ ಬೋರಲಿಂಗಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇತ್ತ ಸ್ಥಳಕ್ಕಾಗಮಿಸಿದ ಪೊಲೀಸರು ಮೃತ ದೇಹಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಅಪಘಾತ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.