ಮಂಡ್ಯ: ಲೋಕಸಭಾ ಚುನಾವಣೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಇಂದು ನಾಮಪತ್ರ ಸಲ್ಲಿಸುವ ಜತೆಗೆ ತಮ್ಮ ಬಲ ಪ್ರದರ್ಶನ ಮಾಡಿದ್ದಾರೆ.
ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಬೆಳಗ್ಗೆ ನಾಮಪತ್ರ ಸಲ್ಲಿಸಿದ ಕುಮಾರಸ್ವಾಮಿ ಅವರಿಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಗೋವಾ ಸಿಎಂ ಪ್ರಮೋದ್ ಸಾವಂತ್, ಮೈಸೂರು ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಮಾಜಿ ಸಚಿವ ಸಿ.ಎಸ್ ಪುಟ್ಟರಾಜು ಸಾಥ್ ನೀಡಿದರು.
ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಎಚ್.ಡಿ ಕುಮಾರಸ್ವಾಮಿ ಅವರು ಇಂದು ಮೂರು ಬಾರಿ ನಾಮಪತ್ರ ಸಲ್ಲಿಸಿದ್ದಾರೆ. ಪ್ರಾರಂಭದಲ್ಲಿ ಯಡಿಯೂರಪ್ಪ, ಗೋವಾ ಸಿಎಂ ಪ್ರಮೋದ್ ಸಾವಂತ್, ಯದುವೀರ್, ಸಿ.ಎಸ್ ಪುಟ್ಟರಾಜು ಜತೆ ನಾಮಪತ್ರ ಸಲ್ಲಿಕೆ ಮಾಡಿದರು.
ಬಳಿಕ ಮಾಜಿ ಸಚಿವ ನಾರಾಯಣಗೌಡ, ಮಾಜಿ ಶಾಸಕರಾದ ಸುರೇಶ್ ಗೌಡ, ರವೀಂದ್ರ ಶ್ರೀಕಂಠಯ್ಯ, ಅನ್ನದಾನಿ ಜತೆ ಉಮೇದುವಾರಿಕೆ ಸಲ್ಲಿಸಿದರು. ಇನ್ನು ಮೂರನೇ ಬಾರಿ ನಿಖಿಲ್ ಕುಮಾರಸ್ವಾಮಿ, ಶಾಸಕ ಎಚ್.ಟಿ ಮಂಜು, ಮಾಜಿ ಸಚಿವ ಸಾ.ರಾ ಮಹೇಶ್, ಜೆಡಿಎಸ್ ಮುಖಂಡ ರಾಮಚಂದ್ರು ಜತೆ ನಾಮಿನೇಶನ್ ಫೈಲ್ ಮಾಡಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಎಚ್.ಡಿ. ಕುಮಾರಸ್ವಾಮಿ ಮಂಡ್ಯದ ಕಾವೇರಿ ಭವನದ ಮುಂಭಾಗ ಇರುವ ಕಾವೇರಿ, ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ವಿಶ್ವೇಶ್ವರಯ್ಯ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಪ್ರತಿಮೆಗೆ ಪುಷ್ಪನಮನ ಸಲ್ಲಿಸೋ ಮೂಲಕ ಮಂಡ್ಯದಲ್ಲಿ ಬಿಜೆಪಿ-ಜೆಡಿಎಸ್ ನಾಯಕರು ಕಾವೇರಮ್ಮನ ಅಸ್ತ್ರ ಪ್ರಯೋಗ ಮಾಡಿದ್ದಾರೆ.
ನಾಮಪತ್ರ ಸಲ್ಲಿಸುವ ವೇಳೆ ಮಾತನಾಡಿದ ಕುಮಾರಸ್ವಾಮಿ, ನಮ್ಮನ್ನು ಮುಗಿಸಲು ಕಾಂಗ್ರೆಸ್‌ಗೆ ಸಾಧ್ಯವೇ ಇಲ್ಲ. ಮಂಡ್ಯ ಜನತೆಯೇ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಬುದ್ಧಿ ಕಲಿಸುತ್ತಾರೆಂದು ವಾಗ್ದಾಳಿ ನಡೆಸಿದರು.
ಇನ್ನು ಜಿಲ್ಲೆಯ ತಂದೆ-ತಾಯಂದಿರು ನನಗೆ ದೊಡ್ಡ ಮಟ್ಟದಲ್ಲಿ ಆಶೀರ್ವಾದ ಮಾಡುತ್ತಾರೆ. ಜೆಡಿಎಸ್ ನೆಲಕಚ್ಚಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಜೆಡಿಎಸ್ ಎಲ್ಲಿ ನೆಲ ಕಚ್ಚಿದೆ? ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿರಬಹುದು. ಜೆಡಿಎಸ್ ಅನ್ನು ನೆಲಕಚ್ಚಿಸಲು ಸಾಧ್ಯವೇ ಇಲ್ಲ ಎಂದು ಕಿಡಿಕಾರಿದ್ದಾರೆ.
ಈ ನಡುವೆ ಮಂಡ್ಯಕ್ಕೆ ತೆರಳುವ ಮುನ್ನ ಕುಮಾರಸ್ವಾಮಿ ಅವರು ಜೆಡಿಎಸ್ ವರಿಷ್ಠ ದೇವೇಗೌಡರ ನಿವಾಸಕ್ಕೆ ಭೇಟಿ ಕೊಟ್ಟು ತಂದೆಯ ಆಶೀರ್ವಾದ ಪಡೆದರು. ಬೆಂಗಳೂರಿನ ಪದ್ಮನಾಭ ನಿವಾಸದಲ್ಲಿ ಆಗಮಿಸಿ ದೇವೇಗೌಡರ ಆಶೀರ್ವಾದ ಪಡೆದು ನಂತರ ಮಂಡ್ಯಕ್ಕೆ ಪ್ರಯಾಣ ಬೆಳೆಸಿದರು.