ಬೆಳಗಾವಿ: ರಾಜ್ಯದ ಉತ್ತರ ಭಾಗದ ಪ್ರಮುಖ ರಾಜಕೀಯ ಕೊಂಡಿ, ಆಹಾರ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗೆ ಸರ್ಕಾರ ರಜೆ ಘೋಷಿಸಿದೆ.
ಸಚಿವರ ನಿಧಾನಕ್ಕೆ ಸಂತಾಪ ಸೂಚಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ಸಚಿವ ಉಮೇಶ್ ಕತ್ತಿ ನಿಧನ ಹಿನ್ನೆಲೆಯಲ್ಲಿ ಬುಧವಾರ ಬೆಳಗಾವಿ ಜಿಲ್ಲೆಯಾದ್ಯಂತ ಶಾಲಾ, ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ ಮಾಡಿದರು.
ನಿನ್ನೆ ರಾತ್ರಿ ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ಸಚಿವ ಉಮೇಶ್ ಕತ್ತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಸಚಿವರ ಅಗಲಿಕೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಉಮೇಶ್ ಕತ್ತಿ ಅವರ ಪಾರ್ಥಿವ ಶರೀರವನ್ನು ಇಂದು ಬೆಳಗ್ಗೆ ಬೆಂಗಳೂರಿನಿಂದ ಬೆಳಗಾವಿಗೆ ಏರ್‌ಲಿಫ್ಟ್ ಮಾಡಲಾಗುವುದು. ಸಂಕೇಶ್ವರದ ಸಕ್ಕರೆ ಕಾರ್ಖಾನೆ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ.
ಅಲ್ಲಿ ಮಧ್ಯಾಹ್ನ 2 ಗಂಟೆವರೆಗೂ ಸಾರ್ವಜನಿಕರ ದರ್ಶನಕ್ಕೆ ಅವಕಾಶವಿದ್ದು, ನಂತರ ಸಂಜೆ 5 ಗಂಟೆ ಸುಮಾರಿಗೆ ಸ್ವಗ್ರಾಮ ಬೆಲ್ಲದ ಬಾಗೇವಾಡಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು. ಸರ್ಕಾರದ ಗೌರವದೊಂದಿಗೆ ಉಮೇಶ್ ಕತ್ತಿ ಅವರ ತೋಟದಲ್ಲೇ ಅಂತ್ಯಕ್ರಿಯೆ ನಡೆಯಲಿದ್ದು, ಸಕಲ ಸಿದ್ಧತೆಯಲ್ಲಿ ಜಿಲ್ಲಾಡಳಿತ ತೊಡಗಿದೆ.