ಮಂಡ್ಯ: ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ನಡೆದ ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೋರಿದ ಆರೋಪದ ಮೇರೆಗೆ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.
ನಾಗಮಂಗಲ ಪಟ್ಟಣ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್ ಅಮಾನತಾದ ಅಧಿಕಾರಿ. ಕರ್ತವ್ಯ ಲೋಪ ಹಾಗೂ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಇನ್ಸ್‌ಪೆಕ್ಟರ್ ಅವರನ್ನು ಅಮಾನತುಗೊಳಿಸಿ ದಕ್ಷಿಣ ವಲಯ ಡಿಐಜಿಪಿ ಬೋರಲಿಂಗಯ್ಯ ಆದೇಶ ಹೊರಡಿಸಿದ್ದಾರೆ.
ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಸೃಷ್ಟಿಯಾದ ಗಲಭೆ ರಾತ್ರಿ ವಿಕೋಪಕ್ಕೆ ಹೋಗಿತ್ತು. ಗಲಾಟೆಗೆ ಸಂಬಂಧಿಸಿದಂತೆ ಪೊಲೀಸರು ಈವರೆಗೆ 150 ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, 52 ಮಂದಿಯನ್ನು ಆರೆಸ್ಟ್ ಮಾಡಲಾಗಿದೆ ಎಂದು ಮಂಡ್ಯ ಎಸ್ ಪಿ ಮಲ್ಲಿಕಾರ್ಜುನ್ ಮಾಹಿತಿ ನೀಡಿದ್ದಾರೆ.
ಇನ್ನು ಸಿಸಿ ಕ್ಯಾಮರಾ ದೃಶ್ಯ ಆಧರಿಸಿ ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ನಾಗಮಂಗಲದ ಬದರಿಕೊಪ್ಪಲಿನಲ್ಲಿ ಗಣೇಶೋತ್ಸವ ವಿಸರ್ಜನಾ ಮೆರವಣಿಗೆ ವೇಳೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿ ಪೆಟ್ರೋಲ್ ಬಾಂಬ್ ಎಸೆದು ದಾಂಧಲೆ ನಡೆಸಿದ್ದರಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಬುಧವಾರ ಸಂಜೆ ಅದ್ದೂರಿ ಗಣಪತಿ ವಿಸರ್ಜನಾ ಮೆರವಣಿಗೆ ಮಾಡಲಾಗುತ್ತಿತ್ತು. ನಾಗಮಂಗಲದ ಮೈಸೂರು ರಸ್ತೆಯಲ್ಲಿರುವ ದರ್ಗಾ ಬಳಿ ಮೆರವಣಿಗೆ ಬರುತ್ತಿದ್ದಂತೆ ಅನ್ಯಕೋಮಿನ ಯುವಕರು ಕಲ್ಲುತೂರಾಟ ನಡೆಸಿದ್ದರು. ಈ ವೇಳೆ ಹಿಂದು- ಮುಸ್ಲಿಂ ಯುವಕರ ನಡುವೆ ವಾಕ್ಸಮರ, ತಳ್ಳಾಟ ನೂಕಾಟ ನಡೆದಿತ್ತು. ಬಳಿಕ ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಹರಸಾಹಸ ಪಟ್ಟರು.