ಮೈಸೂರು: ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾ ಕೃತ್ಯಗಳು ಪ್ರಜಾಪ್ರಭುತ್ವದ ಬುನಾದಿಯನ್ನೇ ಸರ್ವನಾಶ ಮಾಡಬಹುದಾದ ಕೃತ್ಯಗಳಾಗಿವೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಆತಂಕ ವ್ಯಕ್ತಪಡಿಸಿದರು.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೇಂದ್ರ ಹಾಗೂ ಅಲ್ಲಿನ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ. ಮಣಿಪುರದಲ್ಲಿ ಹಲವಾರು ಸಾವು ನೋವುಗಳು ಅದರೂ ವಿಫಲವಾಗಿದೆ. ಪೊಲೀಸರ ಲಾಠಿ ಏಟು ಹಾಗೂ ಅರೆ ಸೇನ ಪಡೆಗಳ ಬಂದುಕಿನಿಂದ ಶಾಂತಿ ನೆಲೆಸಲು ಸಾಧ್ಯವಿಲ್ಲ ಎಂದರು.
ಜಾತಿ ಧರ್ಮಗಳನ್ನು ಮೆಟ್ಟಿನಿಂತು. ಶಾಂತಿ ಸಹನೆ ಹಾಗೂ ಪ್ರೀತಿಯಿಂದ ಮಾತ್ರ ಉತ್ತಮ ಸಮಾಜ ಕಟ್ಟಲು ಸಾಧ್ಯ, ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಜಾಗತಿಕ ಮಟ್ಟದಲ್ಲಿ ಈ ಘಟನೆಯಿಂದ ಭಾರತಕ್ಕೆ ಅವಮಾನವಾಗುತ್ತಿದೆ ಎಂದು ಹೇಳಿದ್ದಾರೆ.
ಸೇನೆಯಲ್ಲಿ ಕಾರ್ಯನಿರ್ವಹಿಸಿರುವ ಸೈನಿಕನ ಪತ್ನಿಗೆ ಈ ರೀತಿ ಆದರೆ ಸೇನೆಯಲ್ಲಿ ಕೆಲಸ ಮಾಡುವ ಸೈನಿಕರ ಆತ್ಮಸ್ಥೈರ್ಯ ಕುಗ್ಗಲಿದೆ. ಎಲ್ಲ ರಾಜಕೀಯ ಪಕ್ಷಗಳು ತಮ್ಮ ಪ್ರತಿಷ್ಠೆಗಳನ್ನು ಬದಿಗೊತ್ತಿ ಅಲ್ಲಿ ಶಾಂತಿ ಸಹಬಾಳ್ವೆ ನೆಲೆಸಲು ಮುಂದಾಗಬೇಕು ಎಂದು ಸಲಹೆ ನೀಡಿದ್ದಾರೆ.
ಕೇಂದ್ರ ಸರ್ಕಾರ ಸರ್ವೋಚ್ಚ ನ್ಯಾಯಾಲಯದ ಮಹಿಳಾ ನ್ಯಾಯಾಧೀಶರಿಂದ ಉನ್ನತ ಮಟ್ಟದ ವಿಚಾರಣೆ ನಡೆಸಿ ಘಟನೆಗೆ ಕಾರಣಿಭೂತರಾದ ಪಾತಕಿಗಳಿಗೆ ಕಾನೂನು ಅಡಿಯಲ್ಲಿ ಕಠಿಣ ಶಿಕ್ಷೆ ನೀಡಲು ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.