ಬೆಂಗಳೂರು: ಕೇಂದ್ರ ಸರ್ಕಾರದ ರೈತ, ಕಾರ್ಮಿಕ ಹಾಗೂ ಜನವಿರೋಧಿ ನೀತಿಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ನೀಡಿರುವ ಸಾರ್ವತ್ರಿಕ ಮುಷ್ಕರದ ಅಂಗವಾಗಿ ರಾಜ್ಯದಲ್ಲಿ ಕಾರ್ಮಿಕರ ಮುಷ್ಕರ ನಡೆಸಲಿದ್ದಾರೆ.
ಅಂಗಡಿಗಳು, ಬಸ್, ಲಾರಿಗಳ ಸಂಚಾರ ಎಂದಿನಂತೆ ಇರಲಿದೆ. ಆದರೆ, ಬೆಂಗಳೂರಿನಲ್ಲಿ ಆಟೋರಿಕ್ಷಾ ಟ್ಯಾಕ್ಸಿ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ದಾಬಸ್ ಪೇಟೆ, ವೈಟ್‌ಫೀಲ್ಡ್, ಜಿಗಣಿ ಬೊಮ್ಮಸಂದ್ರ, ರಾಜಾಜಿನಗರ ಕೈಗಾರಿಕಾ ಪ್ರದೇಶಗಳಲ್ಲಿ ಮುಷ್ಕರಕ್ಕೆ ಬೆಂಬಬಲ ಸೂಚಿಸಿ ಕಾರ್ಖಾನೆಗಳು ಬಂದ್ ಆಗಲಿವೆ ಎಂದು ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಸಂಚಾಲಕ ವಿಜಯಭಾಸ್ಕರ್ ತಿಳಿಸಿದ್ದಾರೆ.
ಕಾರ್ಮಿಕರು ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದು ರೈತ ಮತ್ತು ದಲಿತ ಸಂಘಟನೆಗಳು ಬೆಂಬಲ ಸೂಚಿಸಿವೆ. ಗುರುವಾರ ಬೆಳಗ್ಗೆ 10.30ಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನಕ್ಕೆ ಮೆರವಣಿಗೆಯಲ್ಲಿ ತೆರಳಿ ಪ್ರತಿಭಟನೆ ನಡೆಸಲಾಗುವುದು ಎಂದು ವಿವರಿಸಿದರು.
ಆಟೋರಿಕ್ಷಾ ಟ್ಯಾಕ್ಸಿ ಸಂಚಾರ ಇರಲ್ಲ
ಇಂದಿನ ಮುಷ್ಕರಕ್ಕೆ ಸಂಪೂರ್ಣ ಬೆಂಬಲ ನೀಡಲಾಗಿದ್ದು, ನಗರದಲ್ಲಿ ಆಟೋರಿಕ್ಷಾ ಮತ್ತು ಟ್ಯಾಕ್ಸಿ ಸಂಚಾರ ಇರಲ್ಲ ಎಂದು ಬೆಂಗಳೂರು ಆಟೋರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರ ಸಂಘದ ಅಧ್ಯಕ್ಷ ಜವರೇಗೌಡ ತಿಳಿಸಿದ್ದಾರೆ. ಜನ ವಿರೋಧಿ ಕಾನೂನುಗಳನ್ನು ಕೇಂದ್ರ ಸರಕಾರ ಜಾರಿಗೆ ತಂದಿದೆ. ದುಡಿದ ಹಣವೆಲ್ಲ ಸಂಚಾರ ಪೊಲೀಸರಿಗೆ ದಂಡ ಪಾವತಿಸಲು ಸಾಕಾಗುತ್ತಿಲ್ಲ ಎಂದು ಅಸಮಾಧಾನ ವಯ್ಕತಪಡಿಸಿದ್ದಾರೆ.
ಹೊರರಾಜ್ಯಗಳಿಗೆ ಹೋಗಿರುವ ಲಾರಿಗಳು ರಾಜ್ಯಕ್ಕೆ ವಾಪಸ್ ಆಗುತ್ತಿವೆ. ಅವುಗಳನ್ನು ಅಲ್ಲಲ್ಲಿ ನಿಲ್ಲಿಸಲಾಗುವುದಿಲ್ಲ, ಹೀಗಾಗಿ ಮುಷ್ಕರಕ್ಕೆ ನೈತಿಕ ಬೆಂಬಲ ನೀಡಲಾಗಿದೆ. ಲಾರಿಗಳ ಸಂಚಾರ ಎಂದಿನಂತೆ ಇರಲಿದೆ ಎಂದು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಖಪ್ಪ ತಿಳಿಸಿದ್ದಾರೆ.