ಬೆಂಗಳೂರು: ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಮಾಸಿಕ ಗೌರವಧನ ಹೆಚ್ಚಿಸಬೇಕೆಂಬ ಬಹು ದಿನಗಳ ಬೇಡಿಕೆಗೆ ಸ್ಪಂದಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗೌರವಧನ ದ್ವಿಗುಣಗೊಳಿಸಿ ಆದೇಶ ಹೊರಡಿಸಿದ್ದಾರೆ.
ಅಧಿಕಾರ ವಿಕೇಂದ್ರೀಕರಣದ ಆಧಾರ ಸ್ತಂಭಗಳಾದ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಸ್ಥಳೀಯ ಜನಪ್ರತಿನಿಧಿಗಳಿಗೆ ಗೌರಧನ ಹೆಚ್ಚಿಸಿರುವುದು ಸಂತಸದ ವಿಷಯ ಎಂದು ಬೀಡನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಯಡಹಳ್ಳಿ ಮಹದೇವ್ ತಿಳಿಸಿದ್ದಾರೆ.
ಸದಸ್ಯರಿಗೆ ಪ್ರತಿ ತಿಂಗಳಿಗೆ 2 ಸಾವಿರ, ಉಪಾಧ್ಯಕ್ಷರಿಗೆ 4 ಸಾವಿರ ಮತ್ತು ಅಧ್ಯಕ್ಷರ ಮಾಸಿಕ ಗೌರವಧನವನ್ನು 6 ಸಾವಿರ ರೂಪಾಯಿಗೆ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ರಾಜ್ಯ ಸರ್ಕಾರದ ಪರಿಷ್ಕೃತ ಗೌರವ ಧನ ಹೆಚ್ಚಳಕ್ಕೆ ಹಣಕಾಸು ಇಲಾಖೆ ಭಾನುವಾರ ಅನುಮೋದನೆ ನೀಡಿದೆ. ಪರಿಷ್ಕೃತ ಗೌರವ ಧನ ಹೆಚ್ಚಳ ಡಿಸೆಂಬರ್ 18 -2022ರಿಂದಲೇ ಅನ್ವಯವಾಗುವಂತೆ ಜಾರಿಗೆ ಬರಲಿದೆ.
ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗಲೇ ಸರ್ಕಾರದ ಈ ನಿರ್ಧಾರ ಮಹತ್ವದ್ದಾಗಿದೆ. ಭಾನುವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಆದೇಶಾನುಸಾರ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಜಂಟಿ ಕಾರ್ಯದರ್ಶಿ ಎಂ.ಎನ್. ಬಾನೊಳ್ಳಿ ಈ ಆದೇಶ ಹೊರಡಿಸಿದ್ದಾರೆ. ಈ ವರೆಗೆ ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ 3 ಸಾವಿರ ರೂ., ಉಪಾಧ್ಯಕ್ಷರಿಗೆ 2 ಸಾವಿರ ರೂ. ಹಾಗೂ ಸದಸ್ಯರಿಗೆ 1 ಸಾವಿರ ರೂ.ಗಳನ್ನು ಮಾಸಿಕ ಗೌರವ ಧನವನ್ನಾಗಿ ಸರ್ಕಾರ ನೀಡುತ್ತಿತ್ತು.
ಪ್ರಸ್ತುತ ನೀಡುತ್ತಿದ್ದ ಗೌರವಧನವನ್ನು ಪರಿಷ್ಕರಿಸಿ ಹೊಸ ಆದೇಶ ಹೊರಡಿಸಲಾಗಿದ್ದು, ಹೊಸ ಆದೇಶದಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ 6 ಸಾವಿರ ರೂ., ಉಪಾಧ್ಯಕ್ಷರಿಗೆ 4 ಸಾವಿರ ರೂ. ಹಾಗೂ ಸದಸ್ಯರಿಗೆ 2 ಸಾವಿರ ರೂ. ಗೌರವ ಧನ ಸಿಗಲಿದೆ. ವಿಧಾನಸಭಾ ಚುನಾವಣೆ ಹತ್ತಿರವಿರುವಾಗ ಸರ್ಕಾರ ಗೌರವಧನವನ್ನು ಪರಿಷ್ಕರಿಸಿರುವುದು ಆಡಳಿತಾರೂಢ ಬಿಜೆಪಿಗೆ ಸಹಾಯವಾಗಲಿದೆ ಎನ್ನಲಾಗಿದೆ.
ಗೌರವಧನ ಹೆಚ್ಚಳದ ಭರವಸೆ ನೀಡಿದ್ದ ಸಚಿವ ಕೋಟ: ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಸದಸ್ಯರ ಗೌರವಧನ ಹೆಚ್ಚಳ ಮಾಡುವ ಸಂಬಂಧ ಶೀಘ್ರ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಭರವಸೆ ನೀಡಿದ್ದರು.
ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ನಡೆದ ಅಧಿವೇಶನದ ವೇಳೆ ವಿಧಾನ ಪರಿಷತ್ನಲ್ಲಿ ಕಾಂಗ್ರೆಸ್ನ ಪರಿಷತ್ ಸದಸ್ಯ ಸುನೀಲ್ ಗೌಡ ಪಾಟೀಲ್ ಅವರು ಈ ವಿಚಾರವನ್ನು ಪ್ರಸ್ತಾಪಿಸಿದ್ದರು. ಆಗ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರ ಪರ ಉತ್ತರಿಸಿದ್ದ ಅವರು, ಗೌರವಧನ ಹೆಚ್ಚಿಸುವ ಕುರಿತು ಹಣಕಾಸು ಇಲಾಖೆಯ ಅಧಿಕಾರಿಗಳ ಜೊತೆ ಚರ್ಚಿಸಿ, ಶೀಘ್ರದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದರು.
ಈ ಬಗ್ಗೆ ಸದನದ ಗಮನ ಸೆಳೆದಿದ್ದ ಸುನೀಲ್ ಗೌಡ ಪಾಟೀಲ್, ಗ್ರಾಮ ಪಂಚಾಯಿತಿ ಸದಸ್ಯರಿಗೆ ಕನಿಷ್ಠ ಕೂಲಿಗಿಂತ ಕಡಿಮೆ ಗೌರವಧನ ನೀಡಲಾಗುತ್ತಿದೆ. ಸದ್ಯ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ 3 ಸಾವಿರ ರೂ., ಉಪಾಧ್ಯಕ್ಷರಿಗೆ 2 ಸಾವಿರ ರೂ. ಮತ್ತು ಸದಸ್ಯರಿಗೆ 1 ಸಾವಿರ ರೂ. ಅನ್ನು ಮಾಸಿಕ ಗೌರವಧನ ನೀಡಲಾಗುತ್ತಿದೆ. ಅದನ್ನು ಕ್ರಮವಾಗಿ 5 ಸಾವಿರ ರೂ., 4 ಸಾವಿರ ರೂ. ಮತ್ತು 3 ಸಾವಿರ ರೂ.ಗೆ ಹೆಚ್ಚಿಸಬೇಕು. ಈ ಗೌರವಧನವನ್ನು ಆನ್ಲೈನ್ ಮೂಲಕ ಪಾವತಿಸಬೇಕು. ಅವರೆಲ್ಲರಿಗೂ ಉಚಿತ ಬಸ್ ಪಾಸ್ ನೀಡಬೇಕು ಎಂದು ಆಗ್ರಹಿಸಿದ್ದರು.
ಗೌರವ ಧನವನ್ನು ಗ್ರಾಮ ಪಂಚಾಯಿತಿ ಸದಸ್ಯರು, ಉಪಾಧ್ಯಕ್ಷ, ಅಧ್ಯಕ್ಷರಿಗೆ ದ್ವಿಗುಣ ಮಾಡಲಾಗಿದೆ.ಇದರಿಂದ ಗ್ರಾಮ ಪಂಚಾಯಿತಿಗಳಲ್ಲಿ ಜನ ಪ್ರತಿನಿಧಿಗಳು ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಲು ಸಹಕಾರಿ ಆಗಲಿದ್ದು, ಜತೆಗೆ ಈ ಆದೇಶ ರಾಜ್ಯದಲ್ಲಿರುವ 6 ಸಾವಿರಕ್ಕೂ ಹೆಚ್ಚು ಗ್ರಾಮ ಪಂಚಾಯಿತಿ ಸದಸ್ಯರಿಗೆ ಅನುಕೂಲವಾಗಲಿದೆ.